ವೀರಾಜಪೇಟೆ, ಫೆ. ೨೧: ಸರ್ಕಾರ ಕೊಡಗು ಜಿಲ್ಲೆಯ ಶ್ರೇಯೋಭಿವೃದ್ಧಿಗೆ ಹತ್ತು ಹಲವು ಕಾರ್ಯಕ್ರಮಗಳಿಗೆ ಅನುದಾನ ನೀಡುತ್ತಿದೆ. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಕೋವಿಡ್‌ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಇದೀಗ ಮೆಲ್ಲನೆ ಚೇತರಿಸಿಕೊಳ್ಳುತ್ತಿದೆ. ಪ್ರಮುಖ ಆರ್ಥಿಕ ವಹಿವಾಟುಗಳು ನಡೆಯುತ್ತಿದ್ದು ದೇಶ, ರಾಜ್ಯ ಮುಂಚೂಣಿಯತ್ತ ಸಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅಭಿಪ್ರಾಯಪಟ್ಟರು.

ವಿಶೇಷ ಅನುದಾನದ ರೂ. ೧ ಕೋಟಿ ಪ್ಯಾಕೇಜ್‌ನಡಿಯಲ್ಲಿ ವೀರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾವಾಡಿಯಲ್ಲಿನ ಕುಟ್ಟಂಡ ಐನ್‌ಮನೆ(ಬಲ್ತೇರಿ)ಗೆ ತೆರಳುವ ರಸ್ತೆಗೆ ರೂ. ೨೩ ಲಕ್ಷ ವೆಚ್ಚದ ನೂತನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುವುದು. ರಸ್ತೆ ಕಾಮಗಾರಿಗಳು ನಡೆಯುವ ಸಂದರ್ಭ ಸ್ಥಳೀಯರು ಸಹಕಾರ ನೀಡಬೇಕು. ಪ್ರತಿಯೊಬ್ಬರಿಗೂ ಬದುಕಲು ಮನೆ ಅವಶ್ಯವಿದೆ. ಹಾಗೆಯೇ ವಿದ್ಯುತ್, ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಸರಕಾರದಿಂದ ಒದಗಿಸಿ ಕೊಡುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವುದಾಗಿ ತಿಳಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದರು.

ಬಿಜೆಪಿ ಪ್ರಮುಖರಾದ ಮಾಚಿಮಂಡ ಸುವಿನ್ ಗಣಪತಿ ಮಾತನಾಡಿ, ಗ್ರಾಮಗಳಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣ ಇಲ್ಲಿನ ಗ್ರಾಮೀಣ ಭಾಗದ ರಸ್ತೆಗಳಿಗೆ ವಿಧಾನ ಪರಿಷತ್ತಿನ ಸದಸ್ಯ ಸುಜಾ ಕುಶಾಲಪ್ಪ ಅವರು ವಿಶೇಷ ಮುತುವರ್ಜಿ ವಹಿಸಿ ಸರಕಾರದಿಂದ ಕೊಡಗಿಗೆ ವಿಶೇಷ ಅನುದಾನ ತಂದು ಗ್ರಾಮದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಶ್ರಮ ವಹಿಸಿದ್ದಾರೆ. ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭಗೊAಡು ಸಾರ್ವಜನಿಕ ಬಳಕೆಗೆ ಅವಕಾಶವಾಗಲಿದೆ. ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ. ಈ ನಿಟ್ಟಿನಲ್ಲಿ ಸ್ಥಳೀಯರು ಸಹಕರಿಸಬೇಕು ಎಂದು ಹೇಳಿದರು.

ಭೂಮಿಪೂಜೆ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಬಿ. ನಾಣಯ್ಯ, ಹಾಗೂ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು, ಕುಟ್ಟಂಡ ಕುಟುಂಬದ ಪಟ್ಟೆದಾರರು, ಕುಟುಂಬಸ್ಥರು, ಗುತ್ತಿಗೆದಾರರಾದ ಧನು ಹಾಗೂ ವಿನು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.