ಮಡಿಕೇರಿ, ಫೆ. ೨೭: ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷö್ಯದಿಂದ ಜಿಲ್ಲೆಯಲ್ಲಿ ಹುಲಿಗಳ ಉಪಟಳ ಹೆಚ್ಚಾಗುತ್ತಿದೆ. ಕಳೆದ ೨ ವರ್ಷಗಳಲ್ಲಿ ೬ ಮಾನವ ಜೀವ ಹಾನಿ ಮತ್ತು ಅನೇಕ ಜಾನುವಾರುಗಳು ಸಾವನ್ನಪ್ಪಿದ್ದರೂ ಎಚ್ಚೆತ್ತುಕೊಳ್ಳದ ಸರ್ಕಾರ ಕೊಡಗಿನ ಜನರ ಜೀವಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಆರೋಪಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಡಾನೆಗಳು ತೋಟಗಳನ್ನೇ ಆವಾಸ ಸ್ಥಾನ ಮಾಡಿಕೊಂಡು ಮನುಷ್ಯರನ್ನೇ ಆಹಾರ ಮಾಡಿಕೊಳ್ಳುತ್ತಿವೆ. ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಇರುವುದು ದುರಂತ. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಗೆ ಕೋಟ್ಯಂತರ ಅನುದಾನ ಬರುತ್ತದೆ. ಆದರೆ ವನ್ಯಜೀವಿಗಳು ಆಹಾರವನ್ನು ಅರಸಿ ಜನವಾಸದ ಪ್ರದೇಶಗಳಿಗೆ ದಾಳಿ ಇಡುತ್ತಿವೆ. ಇದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಕಳೆದ ೨೫ ವರ್ಷಗಳಿಂದ ಬಿಜೆಪಿಯವರೇ ಶಾಸಕರುಗಳಾಗಿದ್ದಾರೆ. ಸಂಸದರು ಬಿಜೆಪಿಯವರೇ ಆಗಿದ್ದಾರೆ, ಆದರೆ ಕೊಡಗನ್ನು ಕಾಡುತ್ತಿರುವ ವನ್ಯಜೀವಿಗಳ ದಾಳಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರಕ್ಕೆ ಯಾರೂ ಪ್ರಯತ್ನಿಸಿಲ್ಲ. ಅನೇಕ ಬಾರಿ ಹುಲಿ ದಾಳಿ ನಡೆದರೂ ಒಂದು ಬಾರಿಯೂ ಸಂಸದರು ಭೇಟಿ ನೀಡಿ ಗ್ರಾಮಸ್ಥರಿಗೆ ಸಾಂತ್ವನ ಹೇಳುವ ದೊಡ್ಡತನವನ್ನು ಪ್ರದರ್ಶಿಸಿಲ್ಲ. ಗ್ರಾಮಸ್ಥರು ಹಾಗೂ ಅರಣ್ಯ ಅಧಿಕಾರಿಗಳ ವಿಶೇಷ ಸಭೆ ಕರೆದು ಯೋಜನೆ ರೂಪಿಸುವ ಕಾಳಜಿ ತೋರಿಲ್ಲ ಎಂದು ವೀಣಾ ಅಚ್ಚಯ್ಯ ದೂರಿದರು.

ಜಿಲ್ಲೆಯ ಬಹುತೇಕ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ, ರಸ್ತೆಗಳ ಅಭಿವೃದ್ಧಿಗೆಂದು ಶಾಸಕರುಗಳು ನಿರಂತರ ಭೂಮಿಪೂಜೆ ಮಾಡುತ್ತಿದ್ದಾರೆ. ಆದರೆ, ಅಭಿವೃದ್ಧಿ ಆಗುತ್ತಿಲ್ಲ. ಕೊಡಗಿನ ಜನರನ್ನು ಸಮಾಧಾನಪಡಿಸುವ ಉದ್ದೇಶದಿಂದ ಚುನಾವಣಾ ಸನಿಹದಲ್ಲಿ ಬಜೆಟ್‌ನಲ್ಲಿ ೧೦೦ ಕೋಟಿ ರೂ. ಗಳನ್ನು ಘೋಷಿಸಿದಂತಿದೆ. ಕೇವಲ ೧೦೦ ಕೋಟಿಗಳಲ್ಲಿ ಕೊಡಗಿನ ರಸ್ತೆಗಳ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದ ವೀಣಾ ಅಚ್ಚಯ್ಯ, ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಕಟ್ಟಡಗಳ ಕಾಮಗಾರಿ ಇನ್ನೂ ಕೂಡ ಪೂರ್ಣಗೊಳ್ಳದೆ ಅರ್ಧದಲ್ಲೇ ನಿಂತಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ

ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆ ತರುವ ಕೆಲಸ ಮಾಡುತ್ತೇನೆ. ಮಧ್ಯವರ್ತಿಗಳ ಹಾವಳಿಯಿಂದ ಜನರು ಕಂಗೆಟ್ಟಿದ್ದು ಕೆಲಸ ಮಾಡಿಕೊಳ್ಳಲು ಹಣ ನೀಡಬೇಕಾದ ಸ್ಥಿತಿ ಸೃಷ್ಟಿಯಾಗಿದೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದರು. ಮೈಸೂರು-ಬೆಂಗಳೂರು ಹೆದ್ದಾರಿಗೆ ಕಾವೇರಿ ಹೆಸರು ಸಂಬAಧ ಸಂಸದ ಪ್ರತಾಪ್ ಸಿಂಹ ನಡೆಸುತ್ತಿರುವ ಪ್ರಯತ್ನ ಸ್ವಾಗತಾರ್ಹ ಎಂದು ಶ್ಲಾಘಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಮಡಿಕೇರಿ ಬ್ಲಾಕ್ ಉಪಾಧ್ಯಕ್ಷ ಪ್ರಭು ರೈ, ಸಂಘಟನಾ ಕಾರ್ಯದರ್ಶಿ ರವಿ ಗೌಡ, ಮಹಿಳಾ ಘಟಕದ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಬೊಳ್ಳಜಿರ ಬಿ ಅಯ್ಯಪ್ಪ ಹಾಜರಿದ್ದರು.