ಗೋಣಿಕೊಪ್ಪಲು, ಮಾ. ೬ : ಜೆಡಿಎಸ್ ಪಕ್ಷದ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಟಿ.ಶೆಟ್ಟಿಗೇರಿ ಭಾಗದ ಪರ್ಮಾಲೆ ಗಣೇಶ್ ಹಾಗೂ ೫೦ಕ್ಕೂ ಅಧಿಕ ಪಕ್ಷದ ಪದಾಧಿಕಾರಿಗಳು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧೀಕೃತವಾಗಿ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದ ಮೇರಿಯಂಡ ಸಂಕೇತ್ ಪೂವಯ್ಯ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಅವರ ಮುಂದಾಳತ್ವದಲ್ಲಿ ಹಲವು ಮಂದಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಹುದಿಕೇರಿ ಗ್ರಾಮದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ಮಿದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ವಕ್ತಾರ, ಹೈಕೋರ್ಟ್ ಹಿರಿಯ ವಕೀಲರಾದ ಎ.ಎಸ್. ಪೊನ್ನಣ್ಣ ಮಾತನಾಡಿ ಕ್ಷೇತ್ರದ ಉದ್ದಗಲಕ್ಕೂ ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಅವಕಾಶವಿದೆ ಎಂದರು.

ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಪರ್ಮಾಲೆ ಗಣೇಶ್ ಮಾತನಾಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಉತ್ತಮ ಅವಕಾಶವಿರುವುದರಿಂದ ಜಾತ್ಯಾತೀತ ಮತಗಳು ಒಂದೆಡೆ ಕ್ರೋಢೀಕರಣಗೊಳ್ಳಲು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮಾತನಾಡಿ ಕೊಡಗಿನ ಎರಡು ಕ್ಷೇತ್ರಗಳನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಪಕ್ಷದ ನಾಯಕರು ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ವೀರಾಜಪೇಟೆ ಕ್ಷೇತ್ರದಲ್ಲಿ ಯುವ ಪಡೆ ಕಾಂಗ್ರೆಸ್‌ನೊAದಿಗೆ ಸಕ್ರೀಯವಾಗಿ ತೊಡಗಿಸಿಕೊಂಡಿದೆ ಎಂದರು.

ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್‌ನ ಅಧಕ್ಷೆ ಕೋಳೆರ ಭಾರತಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ನಾಮೇರ ಅಂಕಿತ್ ಜಿಲ್ಲಾ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ಚೆಕ್ಕೆರ ವಾಸು ಕುಟ್ಟಪ್ಪ, ಟಿ. ಶೇಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ, ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಚಂಗುಲAಡ ಸೂರಜ್ ಸೇರಿದಂತೆ ಪಕ್ಷದ ಪ್ರಮುಖರಾದ ಕೊಲ್ಲಿರ ಬೋಪಣ್ಣ ಎಂ.ಹೆಚ್.ಮತೀನ್, ಚೊಟ್ಟೆಯಂಡಮಾಡ ವಿಶು, ಉದಯ, ಶ್ರೀಮಂಗಲ ವಲಯ ಕಾಂಗ್ರೆಸ್ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.