ಸೋಮವಾರಪೇಟೆ, ಮಾ. ೯: ರಾಜಕೀಯ, ಸಾಮಾಜಿಕ, ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿ ರುವುದು ಶ್ಲಾಘನೀಯ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಜಯಣ್ಣ ಹೇಳಿದರು. ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಆಶ್ರಯದಲ್ಲಿ, ಇಲ್ಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಮಹಿಳೆಯರಿಗೆ ನಡೆದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನಗಳಿವೆ ಎಂದ ಅವರು ಮಹಿಳೆಯರು ಸಬಲರಾದರೆ ದೇಶ ಅಭಿವೃದ್ಧಿಯಾಗುತ್ತದೆ. ಇಂದು ಮಹಿಳೆಯರು ಸಾಮಾಜಿಕ, ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾರೆ ಎಂದರು. ಕಾರ್ಯ ಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್. ನರಗುಂದ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.