ಮಡಿಕೇರಿ, ಮಾ. ೧೨: ನಗರದ ಹೊರವಲಯದ ಸಂಪಿಗೆಕಟ್ಟೆ ಬಳಿಯ ಕುರುಚಲು ಕಾಡಿನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರು ಹಾಗೂ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.
ಮಧ್ಯಾಹ್ನದ ಹೊತ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲ ಸಮಯದಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದೆ. ಸ್ಥಳೀಯರು ಇದನ್ನು ಕಂಡು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.