ಗೋಣಿಕೊಪ್ಪಲು, ಮಾ. ೧೫: ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ. ಅಲ್ಲದೆ ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ಬಹಿರಂಗ ಸಭೆಯಲ್ಲಿ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಮುಂದಾಳತ್ವದಲ್ಲಿ ಪಕ್ಷದ ಪದಾಧಿಕಾರಿಗಳು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪುಕಾರು ಸಲ್ಲಿಸಿದ್ದಾರೆ.

ಇತ್ತೀಚೆಗೆ ಗೋಣಿಕೊಪ್ಪಲುವಿನಲ್ಲಿ ಆಯೋಜನೆಗೊಂಡಿದ್ದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ರಾಜ್ಯದ ಮಾಜಿ ಮಂತ್ರಿಗಳಾದ ಕೆ.ಎಸ್. ಈಶ್ವರಪ್ಪನವರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ, ಈಶ್ವರಪ್ಪನವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದೇವೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ತಿಳಿಸಿದ್ದಾರೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶದ ಅಂಗವಾಗಿ ಬಿಜೆಪಿ ಪಕ್ಷದ ನಾಯಕರುಗಳ ಪೋಸ್ಟರ್‌ಗಳನ್ನು ಅಳವಡಿಸುವ ವೇಳೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ, ಈ ಹಿನ್ನೆಲೆ ಗೋಣಿಕೊಪ್ಪ ಪೊಲೀಸರಿಗೆ ಪಕ್ಷದ ವತಿಯಿಂದ ದೂರನ್ನು ನೀಡಿದ್ದೇವೆ ಎಂದರು.

ಪೊಲೀಸ್ ಠಾಣೆಯ ಮುಂದೆ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಘೋಷಣೆ ಕೂಗಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ವೇಳೆ ಪಕ್ಷದ ಯುವ ಘಟಕದ ತಾಲೂಕು ಅಧ್ಯಕ್ಷ ಸೈಫುದ್ದೀನ್, ಅಲ್ಪಸಂಖ್ಯಾತ ಘಟಕದ ತಾಲೂಕು ಅಧ್ಯಕ್ಷ ಮಜೀದ್ ಖಾನ್, ಜೆಡಿಎಸ್ ಮಹಿಳಾ ಅಧ್ಯಕ್ಷೆ ಹೆಚ್.ಬಿ. ಜಯಮ್ಮ, ತಾಲೂಕು ಉಪಾಧ್ಯಕ್ಷ ನೂರ್ ಅಹಮ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ್ ಮೌರ್ಯ, ಪೊನ್ನಂಪೇಟೆ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸರ್ಫುದ್ದೀನ್ ಸೇರಿದಂತೆ ಇನ್ನಿತರ ಪ್ರಮುಖರು ಹಾಜರಿದ್ದರು.