ಸೋಮವಾರಪೇಟೆ,ಮಾ.೨೦: ಇತ್ತೀಚೆಗೆ ಗೋಣಿಕೊಪ್ಪದಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದ ಸಂದರ್ಭ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವಿರುವ ಪೋಸ್ಟರ್ಗೆ ಅವಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟಜಾತಿ ಜಿಲ್ಲಾ ಘಟಕದ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಘಟಕದ ಜಿಲ್ಲಾಧ್ಯಕ್ಷ ಬಿ.ಇ. ಜಯೇಂದ್ರ ಮಾತನಾಡಿ, ವಿಜಯಸಂಕಲ್ಪ ದಿನದ ಕಾರ್ಯಕ್ರಮದ ಆಯೋಜಕರು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವೀರಾಜಪೇಟೆ ಕ್ಷೇತ್ರದ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಸಭೆಯೊಂದರಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ, ಆಜಾನ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧವೂ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಇದೇ ಸಂದರ್ಭ ಒತ್ತಾಯಿಸಿದರು. ಸಂಬAಧಿಸಿದ ಮನವಿಯನ್ನು ತಾಲೂಕು ಕಚೇರಿ ಶಿರಸ್ತೇದಾರ್ ಚಂದ್ರಹಾಸ್ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಈ ಸಂದರ್ಭ ಕಾಂಗ್ರೆಸ್ ಕೆ.ಪಿ.ಸಿ.ಸಿ. ಸದಸ್ಯ ಕೆ.ಎ. ಯಾಕೂಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಚಂಗಪ್ಪ, ಜಿಲ್ಲಾ ಇಂರ್ಯಾಕ್ಟ್ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಮಹಿಳಾ ಘಟಕದ ಅಧ್ಯಕ್ಷೆ ಶೀಲಾ ಡಿಸೋಜ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಎಚ್.ಬಿ. ರಾಜಪ್ಪ, ನಗರ ಘಟಕದ ಅಧ್ಯಕ್ಷ ಎಚ್.ಎ. ನಾಗರಾಜು ಮತ್ತಿತರರು ಇದ್ದರು.