ನವದೆಹಲಿ, ಮಾ. ೨೩: : ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನ ಮಾಡಿದ್ದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ದೋಷಿ ಎಂದು ಗುಜರಾತ್ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
‘ಮೋದಿ‘ ಎಂಬ ಉಪನಾಮದ ಬಗ್ಗೆ ಅಪಮಾನಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕರೊಬ್ಬರು ರಾಹುಲ್ ಗಾಂಧಿ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಅಂತಿಮ ವಿಚಾರಣೆ ನಡೆಸಿ ಎರಡು ಕಡೆಯ ವಾದಗಳನ್ನೂ ಆಲಿಸಿದ್ದ ನ್ಯಾಯಾಲಯ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದ್ದು, ೨ ವರ್ಷ ಜೈಲು ಶಿಕ್ಷೆ ಹಾಗೂ ೧೫ ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ. ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದ್ದು, ೩೦ ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.
೨೦೧೯ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ ಅವರು, ಮೋದಿ ಎಂಬ ಹೆಸರು ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು
(ಮೊದಲ ಪುಟದಿಂದ) ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗದಿರಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ರಾಹುಲ್ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದೂರು ದಾಖಲು ಮಾಡಿದ್ದರು. ೨೦೧೯ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ ೪೯೯ ಮತ್ತು ೫೦೦ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನ್ಯಾಯಾಲಯ ರಾಹುಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಮೇಲ್ಮನವಿಗೆ ನಿರ್ಧಾರ
ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಹೇಳಿದೆ. ಸತ್ಯದ ಪರ ಧ್ವನಿ ಎತ್ತಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು ಶಿಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್, ಕೇಂದ್ರ ಸರ್ಕಾರ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕೋರ್ಟ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.