ವೀರಾಜಪೇಟೆ, ಮಾ. ೨೭: ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಬಹುಮಾನ ವಿತರಣಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎನ್.ಎಂ. ನಾಣಯ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಪ್ರೊ. ಇಟ್ಟಿರ ಕೆ. ಬಿದ್ದಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಅಂಜದೆ ಆತ್ಮವಿಶ್ವಾಸದಿಂದ ಮುನ್ನಡೆಯಬೇಕೆಂದರು ನುಡಿದರು.
ಕಾಲೇಜಿನ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಉಪನ್ಯಾಸಕರಾದ ಡಯಾನ ಎ.ಎಂ. ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಸಮಾರಂಭದ ಆರಂಭದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ದೀಪು ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಎಂ.ಪಿ. ದಮಯಂತಿ ಸ್ವಾಗತಿಸಿ, ಉಪನ್ಯಾಸಕಿ ಗಾಯತ್ರಿ ಕೆ.ಪಿ. ಅವರು ವಂದಿಸಿದರು. ವಿದ್ಯಾರ್ಥಿಗಳಾದ ಹಸೀನಾ ಮತ್ತು ಕಾವೇರಮ್ಮ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.