ಕೂಡಿಗೆ, ಮಾ. ೨೮: ಕೊಡಗು ಜಿಲ್ಲೆಯ ಬಹುಕಾಲದ ಕನಸಾದ ಕೊಡಗು ವಿಶ್ವವಿದ್ಯಾಲಯದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಜ್ಞಾನಜ್ಯೋತಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಆಲ್ಲೈನ್ ಮೂಲಕ ನೆರವೇರಿಸಿದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಕರ್ನಾಟಕ ಸರ್ಕಾರವು ದೀರ್ಘಾವಧಿಯ ದೃಷ್ಟಿಕೋನವನ್ನು ರೂಪಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಮೂಲಕ ಇದನ್ನು ಈಗ ಸಾಕಾರಗೊಳಿಸಲಾಗಿದೆ. ನಮ್ಮ ಒಟ್ಟಾರೆ ಉದ್ದೇಶವು ಗುಣಮಟ್ಟದ ಕೌಶಲ್ಯ ಆಧಾರಿತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ
(ಮೊದಲ ಪುಟದಿಂದ) ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿ ಸಬಲೀಕರಣಗೊಳಿಸುವುದಾಗಿದೆ. ಕೊಡಗಿನಲ್ಲಿ ಹೊಸ ಮಾದರಿಯ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಈ ಕಾರ್ಯವನ್ನು ಸುಗಮಗೊಳಿಸಲಾಗಿದೆ. ವಿಶ್ವವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ಯುವಜನರಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಸದಾಶಯದೊಂದಿಗೆ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ವೈಯಕ್ತಿಕ ಸ್ವಾವಲಂಬನೆಗಾಗಿ, ಕೌಶಲ್ಯ ಅಭಿವೃದ್ಧಿಗೆ ಸಂಬAಧಿಸಿದ ಗುಣಮಟ್ಟದ ಶಿಕ್ಷಣದ ಅಗತ್ಯತೆಯನ್ನು ಒತ್ತಿ ಹೇಳುತ್ತಾ ಕೊಡಗು ವಿಶ್ವವಿದ್ಯಾಲಯದ ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಚಿಕ್ಕ ಅಳುವಾರದಲ್ಲಿರುವ ವಿಶ್ವವಿದ್ಯಾಲಯ ಕೇಂದ್ರದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಮಾತನಾಡಿ, ಈ ನಾಡಿನ ಆಶೋತ್ತರಗಳಿಗೆ ಅನುಗುಣವಾಗಿ ಕೊಡಗು ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ಇಲ್ಲಿ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಹಾಗೂ ಎಲ್ಲರ ಸಲಹೆ ಮತ್ತು ಸಹಕಾರದೊಂದಿಗೆ ಈ ವಿಶ್ವವಿದ್ಯಾನಿಲಯದ ಸರ್ವತೋಮುಖ ಶ್ರೇಯೋಭಿವೃದ್ಧಿಗಾಗಿ ತನ್ನ ನಾಲ್ಕು ವರ್ಷದ ಅವಧಿಯಲ್ಲಿ ಶ್ರಮಿಸಲಾಗುವುದು ಎಂದರು.
ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು, ತೊರೆನೂರು ಗ್ರಾ.ಪಂ. ಅಧ್ಯಕ್ಷೆ ರೂಪ ಮಹೇಶ್, ಉಪಾಧ್ಯಕ್ಷ ಬೀಬಿಯಣ್ಣ, ವಿದ್ಯಾರ್ಥಿಗಳು ಇದ್ದರು.