ಮಡಿಕೇರಿ, ಮಾ. ೨೯: ಮುಸ್ಲಿಮರಿಗೆ ಪ್ರವರ್ಗ ೨ಬಿ ಅಡಿಯಲ್ಲಿದ್ದ ಶೇ. ೪ ರಷ್ಟು ಮೀಸಲಾತಿಯನ್ನು ರದ್ದು ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರಮುಖರು ಹಾಗೂ ಕಾರ್ಯಕರ್ತರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ರಾಜ್ಯ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಪಿ.ಸಿ.ಹಸೈನಾರ್ ಹಾಜಿ ಬಿಜೆಪಿ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಮೀಸಲಾತಿ ವಿಚಾರದಲ್ಲಿ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಒಕ್ಕಲಿಗ ಮತ್ತು ಲಿಂಗಯತ ಸಮುದಾಯಕ್ಕೆ ಶೇ.೧೦ ಮಿಸಲಾತಿಯನ್ನು ನೀಡಿ ಮುಸಲ್ಮಾನರಿಗೆ ಶೇ.೫ಕ್ಕೆ ಏರಿಸಬೇಕಿತ್ತು. ಆದರೆ ಇತರ ಸಮುದಾಯದ ಓಲೈಕೆಗಾಗಿ ಮುಸಲ್ಮಾನರ ೨ಬಿ ಅಡಿಯಲ್ಲಿದ್ದ ಶೇ.೪ ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಜನರಲ್ಲಿ ಗೊಂದಲ ಮೂಡಿಸಿರುವುದು ಸರಿಯಾದ ಕ್ರಮವಲ್ಲ ಎಂದರು.
ಕೆಪಿಸಿಸಿ ವಕ್ತಾರ ಟಿ.ಎಂ. ಶಾಹೀದ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಎಸ್.ಸಿ. ಘಟಕದ ಅಧ್ಯಕ್ಷ ಜಯೇಂದ್ರ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಮುಖಂಡ ಪಿ.ಎಂ. ಖಾಸಿಂ, ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹಮಾನ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎA. ಯಾಕುಬ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ. ರಾಜೇಶ್, ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ. ಪೀಟರ್, ಸೇರಿದಂತೆ ಇನ್ನಿತರರು ಹಾಜರಿದ್ದರು.