ಮಡಿಕೇರಿ, ಮಾ. ೩೧: ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯಲ್ಲಿನ ಹೋಂಸ್ಟೇ, ರೆಸಾರ್ಟ್ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವ ನಿಟ್ಟಿನಲ್ಲಿ ಅನುಸರಿಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಎಚ್ಚರವಹಿಸಬೇಕು ಎಂದರು.
ಮತದಾನದ ೪೮ ಗಂಟೆ ಮುಂಚಿತವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಅವರು ಹಲವು ಸಲಹೆಗಳನ್ನು ನೀಡಿದರು. ನಿಶ್ಚಿತಾರ್ಥ, ಮದುವೆ, ನಾಮಕರಣ ಮತ್ತಿತರ ಖಾಸಗಿ ಸಮಾರಂಭಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ರಾಜಕೀಯ ಪ್ರೇರಿತವಾಗಿರಬಾರದು. ಯಾವುದೇ ಪಕ್ಷದ ಪ್ರಚಾರಕ್ಕೆ ವೇದಿಕೆಯಾಗಬಾರದು ಎಂದರು.
ಹೊಟೇಲ್ ಅಸೋಷಿಯೇಷನ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಅವರು ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸಲಾಗುವುದು ಎಂದು ತಿಳಿಸಿದರು. ಉಪಾಧ್ಯಕ್ಷ ಜಾಹೀರ್ ಅಹಮ್ಮದ್, ಕಾರ್ಯದರ್ಶಿ ನಾಜೀರ್ ಅಹಮ್ಮದ್, ಖಜಾಂಚಿ ಕೆ.ಕೆ. ಭಾಸ್ಕರ್, ಹೋಂಸ್ಟೇ ಅಸೋಷಿಯೇಷನ್ ಕಾರ್ಯದರ್ಶಿ ಮೋಂತಿ ಗಣೇಶ್, ನಿರ್ದೇಶಕ ಅಂಬೆಕಲ್ ನವೀನ್ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.
ಜಿಲ್ಲಾ ಪಂಚಾಯಿತಿ ಸಿಇಓ ಡಾ. ಎಸ್. ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಶಬಾನಾ ಎಂ. ಶೇಖ್ ಇತರರು ಇದ್ದರು.