ಸಿದ್ದಾಪುರ, ಏ. ೫: ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದು ಖಚಿತವೆಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.

ಸಿದ್ದಾಪುರದ ಸ್ವರ್ಣಮಾಲಾದಲ್ಲಿ ಏರ್ಪಡಿಸಲಾದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಹಿಂದುಳಿದ ವರ್ಗದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಜನರು ಬದಲಾವಣೆ ಬಯಸಿದ್ದು, ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಸ್ಥಾನಗಳು ಲಭಿಸಲಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದ್ದಂತಹ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಬಹುತೇಕ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದುಪಡಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಪಕ್ಷವು ಸ್ವಾರ್ಥತನದಿಂದ ಕೂಡಿದ ಪಕ್ಷವಾಗಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗಿದ್ದ ಬಂಗಾರಪ್ಪರವರ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದರು. ರಾಜ್ಯದಲ್ಲಿ ಬಿಜೆಪಿ ಪಕ್ಷವು ಈವರೆಗೆ ಹಿಂದುಳಿದ ವರ್ಗದ ಮಂದಿಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡದೇ ಅನ್ಯಾಯ ಎಸಗಿದೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೈನಂದಿನ ವಸ್ತುಗಳ ಹಾಗೂ ಅಡುಗೆ ಅನಿಲಗಳ ಮತ್ತು ರೈತರು ಬಳಸುತ್ತಿರುವ ಗೊಬ್ಬರಗಳ ಬೆಲೆಗಳು ಗಗನಕ್ಕೇರಿದೆ. ಕಾಂಗ್ರೆಸ್ ಪಕ್ಷವನ್ನು

(ಮೊದಲ ಪುಟದಿಂದ) ಅಧಿಕಾರಕ್ಕೆ ತರಲು ಎಲ್ಲಾ ವರ್ಗದವರು ಸಹಕಾರ ನೀಡಬೇಕೆಂದು ಕೋರಿದರು.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಹಿಂದುಳಿದ ವರ್ಗಕ್ಕೆ ನೀಡಿದ ಕೊಡುಗೆಗಳನ್ನು ಬಿಜೆಪಿ ಸರಕಾರ ರದ್ದುಗೊಳಿಸಿದೆ. ಜಿಲ್ಲೆಯಿಂದ ರಾಜ್ಯದ ಬೊಕ್ಕಸಕ್ಕೆ ಸಾಕಷ್ಟು ತೆರಿಗೆಗಳು ಪಾವತಿಯಾಗುತ್ತಿದ್ದರೂ ಜಿಲ್ಲೆಯ ಅಭಿವೃದ್ಧಿ ಶೂನ್ಯವಾಗಿದೆ. ಜಿಲ್ಲೆಯ ಜ್ವಲಂತ ಸಮಸ್ಯೆ ಪರಿಹಾರಕ್ಕೆ ಜನ ಬೀದಿಗಿಳಿಯಬೇಕಾದ ಪರಿಸ್ಥಿತಿ ಇದೆ. ಜಿಲ್ಲೆಯಲ್ಲಿ ಈ ಹಿಂದೆ ಮಳೆಗೆ ಸಿಲುಕಿ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈವರೆಗೂ ಪುನರ್ವಸತಿ ಕಲ್ಪಿಸಿಕೊಡಲಾಗಲಿಲ್ಲ. ಇದು ಆಡಳಿತ ಪಕ್ಷದ ವೈಫಲ್ಯ ಎಂದರು.

ಕಾAಗ್ರೆಸ್ ಪಕ್ಷವು ಅಧಿಕಾರದಲ್ಲಿರುವ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರಿಗೆ ತಲಾ ೭ ಕೆ.ಜಿ ಅಕ್ಕಿಯನ್ನು ನೀಡಿತ್ತು. ಇದನ್ನು ಇದೀಗ ಬಿಜೆಪಿ ಸರ್ಕಾರವು ೫ ಕೆ.ಜಿಗೆ ಇಳಿಸಿದೆ. ಈ ಮೂಲಕ ಬಡ ವರ್ಗದವರಿಗೆ ಅನ್ಯಾಯ ಎಸಗಿದೆ ಎಂದು ಟೀಕಿಸಿದರು.

ಕೊಡಗು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಂದು ಲಕ್ಷದ ಮೂವತ್ತು ಸಾವಿರದಷ್ಟು ಹಿಂದುಳಿದ ವರ್ಗದ ಜನರಿದ್ದು, ಇವರ ಮೂಲಭೂತ ಸಮಸ್ಯೆಗಳು ಈವರೆಗೂ ಈಡೇರಿರುವುದಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವು ಹಿಂದುಳಿದ ವರ್ಗದ ಸಮಸ್ಯೆಗಳಿಗೆ ಸ್ಪಂದಿಸಿದೆ ಎಂದರು.

ಸಭೆಯಲ್ಲಿ ಮಾಜಿ ಸಚಿವೆ ಸುಮಾ ವಸಂತ್, ಮಾಜಿ ಶಾಸಕರಾದ ಸಿ.ಎಸ್ ಅರುಣ್ ಮಾಚಯ್ಯ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್‌ನ ಹಿಂದುಳಿದ ವರ್ಗದ ಅಧ್ಯಕ್ಷ ಬಾನಂಡ ಪ್ರಥ್ಯು ವಹಿಸಿದ್ದರು. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಎಂ. ಬಿಜೋಯ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಸಮಾವೇಶಕ್ಕೂ ಮೊದಲು ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಾಲಯದ ಸಮೀಪದಿಂದ ಸಿದ್ದಾಪುರದ ಸ್ವರ್ಣಮಾಲಾದವರೆಗೆ ಕಾರ್ಯಕರ್ತರ ಜಾಥಾವು ಚೆಂಡೆಯೊAದಿಗೆ ತೆರಳಿತು. ಕಾರ್ಯಕರ್ತರ ಸಭೆಯಲ್ಲಿ ಸೋಮವಾರಪೇಟೆ ತಾಲೂಕಿನ ಅಮ್ ಆದ್ಮಿ ಪಕ್ಷದ ಮುಖಂಡರಾದ ಹಾಗೂ ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಟಿ.ಕೆ. ಸಾಯಿ ಕುಮಾರ್ ಅವರು ಪಕ್ಷವನ್ನು ತೊರೆದು ಮಧು ಬಂಗಾರಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅಲ್ಲದೇ ಚೆನ್ನಯ್ಯನಕೋಟೆಯ ಮಾಜಿ ಜಿ.ಪಂ. ಸದಸ್ಯ ಹೆಚ್. ಗಣೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.