ಸೋಮವಾರಪೇಟೆ, ಏ. ೧೦: ಉತ್ತರ ಕೊಡಗಿನ ಪುಷ್ಪಗಿರಿ ಬೆಟ್ಟಶ್ರೇಣಿ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಂಪ್ರದಾಯಿಕ ಆಚರಣೆಗಳ ಮೂಲಕ ಸುಗ್ಗಿ ಉತ್ಸವಗಳು ನಡೆಯುತ್ತಿದ್ದು, ಸಮೀಪದ ನಗರಳ್ಳಿ ಗ್ರಾಮದಲ್ಲಿ ಇಂದು ನಡೆದ ಕೂತಿನಾಡು ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯೊಂದಿಗೆ ಸಂಪನ್ನಗೊAಡು, ಸಾಂಪ್ರದಾಯಿಕ ಸೊಗಡನ್ನು ಸಾಕ್ಷೀಕರಿಸಿತು.

ಕೂತಿನಾಡಿಗೆ ಸೇರಿದ ೧೮ ಗ್ರಾಮಗಳ ನಿವಾಸಿಗಳು ನಗರಳ್ಳಿ ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಶ್ರೀ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮದೇವತೆ ಸಬ್ಬಮ್ಮ ದೇವಿಗೆ ೧೫ ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿ, ಗ್ರಾಮ ಸುಭೀಕ್ಷೆಗೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಪ್ರಾರ್ಥನೆ ಮಾಡುವ ಮೂಲಕ ಪ್ರಸಕ್ತ ಸಾಲಿನ ಸುಗ್ಗಿ ಉತ್ಸವವನ್ನು ಆಚರಿಸಲಾಯಿತು.

ತಲೆತಲಾಂತರಗಳಿAದ ಗ್ರಾಮೀಣ ಭಾಗದಲ್ಲಿ ಸುಗ್ಗಿ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಗ್ರಾಮದ ನಿವಾಸಿಗಳು, ಮಹಿಳೆಯರು, ಮಕ್ಕಳು, ಹಿರಿಯರು ಉತ್ಸವದಲ್ಲಿ ಭಾಗವಹಿಸಿ ಗ್ರಾಮದೇವತೆಗೆ ಇಷ್ಟಾರ್ಥಗಳ ನೆರವೇರಿಕೆಗೆ ಪ್ರಾರ್ಥಿಸಿದರು. ಅದರಲ್ಲೂ ಕುಟುಂಬ ಸಮೇತ ತವರಿನ ಸುಗ್ಗಿಯಲ್ಲಿ ಭಾಗವಹಿಸುವ ಮೂಲಕ ಸಂಭ್ರಮದಿAದ ಸುಗ್ಗಿಯಲ್ಲಿ ಪಾಲ್ಗೊಂಡರು.

ಸುಗ್ಗಿ ಉತ್ಸವದ ಕೊನೆ ದಿನವಾದ ಸೋಮವಾರ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ ೪ ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ಯಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ತೆರೆ ಬಿದ್ದಿತು.

ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರವನ್ನು ಅಭಿನಯಿಸಿದರು. ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರದಿದ್ದವರಿಗೆ ಮನವರಿಕೆ ಮಾಡಿದರು.

ಸುಗ್ಗಿ ಕುಣಿತ, ಸುಗ್ಗಿಹಾಡುವದು, ಬಿಲ್ಲು ತೂಗುವದು ಸೇರಿದಂತೆ ವಿವಿಧ ಜಾನಪದ ನೃತ್ಯಗಳು ನಡೆದವು. ೧೮ ಗ್ರಾಮಗಳ ನವ ದಂಪತಿಗಳು ಮದುವೆ ಕಾಣಿಕೆಯನ್ನು ಸಲ್ಲಿಸಿದರು. ಹರಕೆ ತಿರಿಸುವದು ಮತ್ತು ಹರಕೆ ಮಾಡಿಕೊಳ್ಳುವ ಕಾರ್ಯಗಳು ನಡೆದವು.

ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.

ಸುಗ್ಗಿ ಕಟ್ಟೆಯ ಮುಖ್ಯ ರಂಗದಲ್ಲಿ ಈಡುಗಾಯಿ ಒಡೆಯಲಾಯಿತು. ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಬಿ. ಜಗದೀಶ್, ಉಪಾಧ್ಯಕ್ಷ ಸಿ.ಎಸ್. ಬೋಪಯ್ಯ, ಕಾರ್ಯದರ್ಶಿ ಕೆ.ಯು. ಜಗದೀಶ್, ಖಜಾಂಚಿ ಎನ್.ಬಿ. ಸುರೇಶ್, ಸಹ ಕಾರ್ಯದರ್ಶಿ ಬಿ.ಆರ್. ಪ್ರವೀಣ್, ಸಂಚಾಲಕ ಜಿ.ಆರ್.ಸುರೇಶ್ ಸೇರಿದಂತೆ ಇತರರು ಸುಗ್ಗಿ ಉತ್ಸವದ ಉಸ್ತುವಾರಿ ವಹಿಸಿದ್ದರು.