ಸೋಮವಾರಪೇಟೆ, ಏ. ೧೩: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. ೨.೫೦ ಕೋಟಿ ವೆಚ್ಚದಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿತು.

ನಗರೋತ್ಥಾನ ಯೋಜನೆಯಡಿಯಲ್ಲಿ ಪಟ್ಟಣದಲ್ಲಿ ಕೈಗೊಂಡಿರುವ ಕಾಮಗಾರಿಗಳು ಕಳಪೆಯಾಗಿವೆ ಮತ್ತು ಅವಶ್ಯವಿಲ್ಲದ ಕಡೆ ಡಾಂಬರು ರಸ್ತೆ ಮತ್ತು ಕಾಂಕ್ರೀಟ್ ಚರಂಡಿ ನಿರ್ಮಿಸಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಬಸಪ್ಪ, ಕಾರ್ಯಪಾಲಕ ಅಭಿಯಂತರ ಶಿವಪ್ರಕಾಶ್, ಸಹಾಯಕ ಅಭಿಯಂತರ ಹೇಮಂತ್‌ಕುಮಾರ್ ತಂಡ ಪಟ್ಟಣದಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ವೀಕ್ಷಿಸಿದರು. ಕೆಲವು ಕಡೆ ಕಾಮಗಾರಿ ಗುಣಮಟ್ಟವನ್ನು ಹೊಂದಿಲ್ಲ. ತಕ್ಷಣವೇ ಇದನ್ನು ಸರಿಪಡಿಸಬೇಕೆಂದು ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಂದರ್ಭ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ನಾಚಪ್ಪ, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕನ್ಸಲ್‌ಟೆನ್ಸಿಯ ಸಿಬ್ಬಂದಿಗಳು, ಗುತ್ತಿಗೆದಾರ ಇದ್ದರು.