ಮಡಿಕೇರಿ, ಏ.೨೧: ಮಾರ್ಚ್/ಏಪ್ರಿಲ್ ನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವು ತಾ. ೨೪ ರಿಂದ ಮೇ ೨ ರವರೆಗೆ ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಮೌಲ್ಯಮಾಪನ ಕಾರ್ಯವನ್ನು ಯಾವುದೇ ಅಡಚಣೆ ಮತ್ತು ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ನಿರ್ಬಂಧಿತ ಪ್ರದೇಶದ ಒಳಗೆ ಮೌಲ್ಯಮಾಪನ ಕಾರ್ಯದ ಅಧಿಕಾರಿ/ಸಿಬ್ಬಂದಿಗಳನ್ನು ಹೊರತುಪಡಿಸಿ ಉಳಿದಂತೆ ಯಾರೇ ವ್ಯಕ್ತಿಗಳಿಗೆ ಪ್ರವೇಶ ಇರುವುದಿಲ್ಲ. ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅವರು ತಿಳಿಸಿದ್ದಾರೆ.