ಸೋಮವಾರಪೇಟೆ, ಏ. ೨೪: ಮಂಡಲ ಬಿಜೆಪಿ ವತಿಯಿಂದ ಇಲ್ಲಿನ ಜೇಸೀ ವೇದಿಕೆಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಪಟ್ಟಣ ಪಂಚಾಯಿತಿಯ ಈರ್ವರು ಸದಸ್ಯರು ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು.

ಪಟ್ಟಣ ಪಂಚಾಯಿತಿ ಸದಸ್ಯರುಗಳಾಗಿದ್ದ ಜೀವನ್ ಹಾಗೂ ನಾಗರತ್ನ, ಚೌಡ್ಲು ಗ್ರಾ.ಪಂ. ಮಾಜಿ ಅಧ್ಯಕ್ಷೆ ವನಜ ರವಿ, ಹಾನಗಲ್ಲು ಗ್ರಾ.ಪಂ. ಮಾಜಿ ಅಧ್ಯಕ್ಷ ರಾಜು ಪೊನ್ನಪ್ಪ ಸೇರಿದಂತೆ ವಿವಿಧ ಗ್ರಾಮೀಣ ಭಾಗಗಳಿಂದ ಹಲವು ಮಂದಿ ಕಾರ್ಯಕರ್ತರು ಶಾಸಕ ರಂಜನ್, ಮಂಡಲ ಅಧ್ಯಕ್ಷ ಮನುಕುಮಾರ್ ರೈ ಸೇರಿದಂತೆ ಇತರ ಮುಖಂಡರ ಉಪಸ್ಥಿತಿಯಲ್ಲಿ ಬಿಜೆಪಿ ಸೇರಿದರು.