ಮುಳ್ಳೂರು, ಏ. ೨೯: ಇಲ್ಲಿಗೆ ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇದುವರೆಗೂ ಒಂದು ಹನಿಯೂ ಮಳೆಯಾಗದ ಹಿನ್ನೆಲೆಯಲ್ಲಿ ರೈತರು, ಮತ್ತು ಜನರು ಬಿಸಿಲಿನ ಬೇಗೆಗೆ ತತ್ತರಿಸಿದ್ದು ಮಳೆಯ ಆಗಮನಕ್ಕಾಗಿ ಕಾಯುತ್ತಿದ್ದಾರೆ.

ಎರಡು, ಮೂರು ದಿನಗಳಿಂದ ಗೌಡಳ್ಳಿ ವ್ಯಾಪ್ತಿ ಹೊರತು ಪಡಿಸಿದಂತೆ ಬೇರೆ ಕಡೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗಿತ್ತು ಗೌಡಳ್ಳಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾದರೂ ಮಳೆಯಾಗದಿರುವ ಹಿನ್ನೆಲೆಯಲ್ಲಿ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಮೀಪದ ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟವನ್ನು ಹತ್ತಿ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು.

ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಪಿ. ಭರತ್‌ಕುಮಾರ್, ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕ ಸುರೇಶ್, ದಿನೇಶ್, ಪ್ರಮುಖರಾದ ಪುಷ್ಪ ಸುರೇಶ್, ಹಂಸ ಭರತ್, ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೊನ್ನಪ್ಪ ಮುಂತಾದವರು ಭಾಗವಹಿಸಿದ್ದರು.

-ಭಾಸ್ಕರ್ ಮುಳ್ಳೂರು