ವೀರಾಜಪೇಟೆ, ಮೇ ೨: ವೀರಾಜಪೇಟೆ ಕ್ಷೇತ್ರದ ಎಲ್ಲಾ ಭಾಗಗಳಲ್ಲಿ ಸಂಚರಿಸಿ ಗ್ರಾಮೀಣ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಕ್ಷೇತ್ರದ ಹಲವೆಡೆ ರಸ್ತೆ, ವಸತಿ, ನೀರು, ವಿದ್ಯುತ್ಗೆ ಪರದಾಡುವ ಪರಿಸ್ಥಿತಿ ಇದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ವೀರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಹೇಳಿದರು.
ವೀರಾಜಪೇಟೆ ನಗರದಲ್ಲಿ ಮತಯಾಚಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಭಿವೃದ್ಧಿ ಪರವಾದ ಆಶ್ವಾಸನೆಗಳನ್ನು ನೀಡಿದೆ. ಪಕ್ಷ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ವೀರಾಜಪೇಟೆ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿ ಮಾಡಲಾಗುವುದು ಎಂದರು. ಮತಯಾಚನೆ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯ ಡಿ.ಪಿ. ರಾಜೇಶ್ ಪದ್ಮನಾಭ, ಡಿ.ಸಿ. ದ್ರುವಕುಮಾರ್ ಸೇರಿದಂತೆ ಇತರರು ಇದ್ದರು.