ಸಿದ್ದಾಪುರ, ಮೇ ೩ : ನೆಲ್ಯಹುದಿಕೇರಿ ಪಟ್ಟಣದಲ್ಲಿ ಮಡಿಕೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ ಅಪ್ಪಚ್ಚುರಂಜನ್ ರವರು ಮತಯಾಚನೆ ಮಾಡಿದರು. ನಂತರ ಪಟ್ಟಣದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ತನ್ನ ಅಧಿಕಾರದ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕೆಲಸಕ್ಕೆ ಸ್ಪಂದಿಸಿರುತ್ತೇನೆ. ಎಲ್ಲಾ ಜನಾಂಗದ ಜನರ ಶ್ರೀರಕ್ಷೆಯೊಂದಿಗೆ ಈ ಬಾರಿ ಗೆಲುವು ದೊರಕಲಿದೆ ಎಂದರು. ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ಮಾಡುತ್ತಿದ್ದು, ವಿವಿಧ ಪಕ್ಷಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರು ಸೇರ್ಪಡೆಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ನೆಲ್ಯಹುದಿಕೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನಗಳನ್ನು ನೀಡಿರುವುದಾಗಿ ತಿಳಿಸಿದರು.

ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷರಾದ ವಿ.ಕೆ ಲೋಕೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ ಎಂದರು. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಸರ್ಕಾರವು ಜಿಲ್ಲೆಯ ಹಲವಾರು ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿ ಕಾರ್ಯಗಳಿಗೆ ಅನುದಾನಗಳನ್ನು ನೀಡಿರುತ್ತದೆ ಎಂದರು. ಜಿಲ್ಲೆಯಲ್ಲಿ ಪ್ರಳಯದ ಸಂದರ್ಭದಲ್ಲಿ ಹಾಗೂ ಕೊರೊನಾದ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರಾದ ರಂಜನ್ ರವರು ತಮ್ಮ ಜೀವದ ಹಂಗು ತೊರೆದು ಜನತೆಯ ಸಮಸ್ಯೆಗಳಿಗೆ ಸಕಾಲಕ್ಕೆ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ನೆಲ್ಯಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬೆಳ್ಯಪ್ಪ, ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ ಅಧ್ಯಕ್ಷೆ ಅನಿತಾ, ಸದಸ್ಯರಾದ ಭುವೇಂದ್ರ, ತನು ಮಹೇಶ್ ಹಾಗೂ ಪಕ್ಷದ ಪದಾಧಿಕಾರಿಗಳಾದ ಅಪ್ರು ರವೀಂದ್ರ ಹಾಗೂ ಇನ್ನಿತರರು ಹಾಜರಿದ್ದರು.