ಮಡಿಕೇರಿ, ಮೇ. ೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ವಿರುದ್ಧ ಚಾರಿತ್ರö್ಯವಧೆ ಹಾಗೂ ಕೋಮು ಗಲಭೆ ಬಿಂಬಿಸುವ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಏ. ೩೦ ರಂದು ವೀರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಜಿ. ಬೋಪಯ್ಯ ಅವರ ಪರ ಪ್ರಚಾರ ಭಾಷಣ ಮಾಡುವ ಸಂದರ್ಭ ಅಡ್ಡಂಡ ಕಾರ್ಯಪ್ಪ ಅವರು ಆಕ್ಷೇಪಾರ್ಹ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್, ಕಾರ್ಯದರ್ಶಿ ಸಂಜಯ್ ಯಾದವ್, ಬಿ.ಎಸ್. ಸಿದ್ಧರಾಜು ಫೇಸ್‌ಬುಕ್‌ನಲ್ಲಿದ್ದ ವೀಡಿಯೋವನ್ನು ಉಲ್ಲೇಖಿಸಿ ದೂರು ನೀಡಿದ್ದಾರೆ.
ಆರೋಪ ಅಸಂಜ್ಞೇಯ ಸ್ವರೂಪದ ಪ್ರಕರಣವಾಗಿರುವುದರಿಂದ ನ್ಯಾಯಾಲಯದಲ್ಲಿ ವ್ಯವಹರಿಸಿಕೊಳ್ಳುವಂತೆ ಪೊಲೀಸರು ಸೂಚಿಸಿದ ಹಿನ್ನೆಲೆ ಕ್ಷಿಪ್ರ ಕಾರ್ಯಾಚರಣೆ ಪಡೆ ಮೇ ೨ರಂದು ವೀರಾಜಪೇಟೆ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದಿಟ್ಟಿತ್ತು. ಆನಂತರ ನ್ಯಾಯಾಧೀಶರು ಪ್ರಕರಣ ದಾಖಲಿಸಿಕೊಳ್ಳಲು ಅನುಮತಿ ನೀಡಿದ ಬಳಿಕ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.