ಮಡಿಕೇರಿ, ಮೇ ೫: ಕೋಮು ಸಂಘರ್ಷ ಸೃಷ್ಟಿಸುವ ಆಕ್ಷೇಪಾರ್ಹ ಭಾಷಣ ಮಾಡಿದ ಆರೋಪದಡಿ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಸಂದರ್ಭ ಅಡ್ಡಂಡ ಕಾರ್ಯಪ್ಪ ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯ ನೀಡುವುದಾಗಿ ಘೋಷಿಸಿದೆ. ಹಿಂದೂಗಳನ್ನು ಕೊಲ್ಲಲು ತರಬೇತಿ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಕಾಂಗ್ರೆಸ್ ಘೋಷಿಸಿದೆ ಎಂದು ಹೇಳಿದ್ದಾರೆ ಎಂದು ಅಧಿಕಾರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಮಾತುಗಳು ಧರ್ಮಗಳ ನಡುವೆ ಸಾಮರಸ್ಯ ಕದಡಿ ಭಯ ಭೀತಿ ಮೂಡಿಸುವಂತಿವೆ. ಜೊತೆಗೆ ಚುನಾವಣೆ ಸಂಬAಧ ಕೆಲವು ಸುಳ್ಳು ಮಾಹಿತಿಯನ್ನೂ ನೀಡಿದ್ದಾರೆ. ಪ್ರಚೋಧನಕಾರಿ ಭಾಷಣ ಮಾಡಿರುವುದರಿಂದ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ಹಿನ್ನೆಲೆ ಕಾರ್ಯಪ್ಪ ವಿರುದ್ಧ ಕ್ರಮಕೈಗೊಳ್ಳುವಂತೆ ಕ್ಷಿಪ್ರ ಪರಿಶೀಲನಾ ತಂಡದ ಅಧಿಕಾರಿ ಆರ್.ಎನ್. ಕುಮಾರಸ್ವಾಮಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.