ಮಡಿಕೇರಿ,ಮೇ ೭ : ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು ರೂ.೨೨ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವದಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಹೇಳಿದರು.

ಮುಕ್ಕೋಡ್ಲು ಹಾಗೂ ಮಕ್ಕಂದೂರುವಿನಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಅವರು ಮಾತನಾಡಿದರು. ತಂತಿಪಾಲ, ಹಮ್ಮಿಯಾಲ ರಸ್ತೆ ಕಾಮಗಾರಿ ಸೇರಿದಂತೆ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು ರೂ.೨೨ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರ ಜಿಲ್ಲೆಗೆ ಹಲವಷ್ಟು ಅನುದಾನ, ಯೊಜನೆಗಳನ್ನು ನೀಡಿದ್ದು, ಪ್ರತಿ ಮನೆಗೆ ಉಚಿತ ವಿದ್ಯುತ್, ಉಚಿತ ಗ್ಯಾಸ್ ನೀಡಲಾಗಿದೆ.

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ೧೩೮ ಕೋಟಿ ಪರಿಹಾರ ನೀಡಲಾಗಿದೆ. ಮೀಸಲಾತಿ, ಹಕ್ಕುಪತ್ರ, ಪಟ್ಟೆ ನೀಡಲಾಗಿದೆ. ಸುಸಜ್ಜಿತ ಮೆಡಿಕಲ್ ಕಾಲೇಜು, ೪೫೦ ಸಾಮರ್ಥ್ಯದ ಆಸ್ಪತ್ರೆ ಕ್ರಿಟಿಕಲ್ ಕೇರ್ ಸೆಂಟರ್, ಯೂನಿವರ್ಸಿಟಿ ತೆರೆಯಲಾಗಿದೆ.

ಮೊರಾರ್ಜಿ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಬಿಜೆಪಿ ಸರಕಾರ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಮತಯಾಚನೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಬಿಜೆಪಿ ಗೆಲ್ಲುವದರೊಂದಿಗೆ ರಾಜ್ಯದಲ್ಲಿಯೂ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎ.ಹರೀಶ್, ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಬಿ.ಎನ್.ರಮೇಶ್, ಸುನಂದ, ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ, ಬೂತ್ ಅಧ್ಯಕ್ಷ ಚಂದ್ರಶೇಖರ್ ಹಾಗೂ ಇತರರು ಪಾಲ್ಗೊಂಡಿದ್ದರು.