ಮಡಿಕೇರಿ, ಮೇ ೨೨: ವಿಧಾನ ಸೌಧದಲ್ಲಿಂದು ನೂತನ ಸಚಿವರು, ಶಾಸಕರುಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಿತು. ರಾಜಭವನದಲ್ಲಿ ಕಾಂಗ್ರೆಸ್ ಸರ್ಕಾರದ ಹಂಗಾಮಿ ವಿಧಾನ ಸಭಾಧ್ಯಕ್ಷ ಆರ್.ವಿ. ದೇಶಪಾಂಡೆ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ನಂತರ ವಿಧಾನ ಸೌಧದಲ್ಲಿ ಆರ್.ವಿ. ದೇಶಪಾಂಡೆ ಅವರ ಸಮ್ಮುಖದಲ್ಲಿ ಸಚಿವರು, ಶಾಸಕರುಗಳು ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಇವರುಗಳು ಮಾತೆ ಕಾವೇರಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರುಗಳು ಕೂಡ ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯದ ೨೨೪ ಕ್ಷೇತ್ರಗಳ ಶಾಸಕರುಗಳ ಪೈಕಿ ೧೮೨ ಮಂದಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ೪೨ ಮಂದಿ ತಾ. ೨೩ರಂದು (ಇಂದು) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.