ಸೋಮವಾರಪೇಟೆ, ಮೇ ೨೩ : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕ ಡಾ. ಮಂಥರ್ ಗೌಡ ಅವರು ಇಂದು ಕ್ಷೇತ್ರ ವ್ಯಾಪ್ತಿಯಲ್ಲಿ ಸಂಚರಿಸಿ, ಸಾರ್ವಜನಿಕ ಸಮಸ್ಯೆಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರೀ ಮಳೆ, ಗಾಳಿ, ಗುಡುಗು ಸಿಡಿಲಿಗೆ ಹಾನಿಗೊಂಡ ಮನೆಗೆ ಭೇಟಿ ನೀಡಿದ ಶಾಸಕರು, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಇದರೊಂದಿಗೆ ಮಾದಾಪುರ ಆರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ತಾಲೂಕಿನ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಬೆಟ್ಟ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಒಳಗಾಗಿ ಹಾನಿಗೊಳಗಾದ ಪುರಂದರ ಎಂಬವರ ಮನೆಗೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಶಾಸಕರು, ತಕ್ಷಣ ಸರಕಾರದಿಂದ ಆಗಬೇಕಾದ ಕ್ರಮಗಳನ್ನು ಕೈಗೊಳ್ಳಲು ತಹಶೀಲ್ದಾರ್ ಎಸ್.ಎನ್. ನರಗುಂದ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭ ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಉಪಸ್ಥಿತರಿದ್ದರು.
ಆಸ್ಪತ್ರೆಗೆ ಭೇಟಿ: ನಂತರ ಮಾದಾಪುರ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಆರೋಗ್ಯ ಕೇಂದ್ರದ ಸ್ವಚ್ಛತೆ, ರೋಗಿಗಳ ವಿವರ, ಆರೋಗ್ಯ ಕೇಂದ್ರದ ಸೌಲಭ್ಯಗಳನ್ನು ವೀಕ್ಷಿಸಿ, ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಭಾಗದ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ತುರ್ತು ಸಂದರ್ಭಗಳಲ್ಲಿ ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಬೇಕು. ಆಂಬ್ಯುಲೆನ್ಸ್ಗಳು ಸದಾ ಸುಸ್ಥಿತಿಯಲ್ಲಿರುವಂತೆ ಗಮನ ಹರಿಸಬೇಕೆಂದು ಸೂಚನೆ ನೀಡಿದರು. ಇದರೊಂದಿಗೆ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಬಿ. ಸತೀಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಕೆ.ಎಂ. ಲೋಕೇಶ್, ಪ್ರಮುಖರಾದ ಚೇತನ್, ವಿನು, ಲಾರೆನ್ಸ್, ಅಬ್ದುಲ್ ರಜಾಕ್, ದಾದು ಬೋಪಯ್ಯ, ನಾಸಿರ್ ಸೀದಿ, ಅಜೀಜ್, ರಘು ಮಾದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.