ವೀರಾಜಪೇಟೆ, ಮೇ ೨೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾಗಿರುವ ಶಾಸಕರಾದ ಅಜ್ಜಿಕುಟ್ಟಿರ ಪೊನ್ನಣ್ಣ ನವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಕೊಂಡು ತಾ. ೨೫ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅಖಿಲ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡವ ಜನಾಂಗದ ವಿವಿಧ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆ ನಡೆಯಲಿದೆ ಎಂದು ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೊಡವ ಜನಾಂಗ ಚುನಾಯಿತ ಪ್ರತಿನಿಧಿ ಯೊಬ್ಬರಿಗೆ ಸುದೀರ್ಘ ಅವಧಿಯ ಬಳಿಕ ಸಚಿವ ಸ್ಥಾನ ದೊರಕುವ ಅವಕಾಶವಿದೆ. ಪಕ್ಷಭೇದ ಮರೆತು ಒತ್ತಾಯಿಸಬೇಕಿದೆ. ಈ ನಿಟ್ಟಿನಲ್ಲಿ ಕೊಡವ ಜನಾಂಗದ ಪ್ರತಿನಿಧಿ ಯೊಬ್ಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಜನಾಂಗಕ್ಕೆ ಸರ್ಕಾರದಲ್ಲಿ ಪ್ರಾತಿನಿಧ್ಯ ಹಾಗೂ ಕೊಡಗಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲು ಒಕ್ಕೊರಲಿನ ನಿರ್ಣಯದ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.