ಮೂರ್ನಾಡು, ಮೇ ೨೭: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ ಯನ್ನು ಆಚರಿಸಲಾಯಿತು. ಇಂದಿನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳು ಈ ರೀತಿಯ ವೇದಿಕೆಯನ್ನು ಉಪಯೋಗಿಸಿ ಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾಕ್ಟರ್ ಪ್ರಿಯದರ್ಶಿನಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಇದು ಸೂಕ್ತವಾದ ವೇದಿಕೆಯಾಗಿದೆ ಯಾವುದೇ ಹಿಂಜರಿಕೆ ಇಲ್ಲದೆ ತಮ್ಮಲ್ಲಿನ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣ್ಯ ಅವರು ಮಾತನಾಡಿ ಶೈಕ್ಷಣಿಕ ಪಠ್ಯಗಳ ನಡುವೆ ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತರುತ್ತದೆ ಎಂದು ಅಭಿಪ್ರಾಯಪಟ್ಟರು. ಮೂರ್ನಾಡು ವಿದ್ಯಾಸಂಸ್ಥೆಯ ನಿರ್ದೇಶಕರಾದ ತೇಲಪಂಡ ಶೈಲ ಮಾತನಾಡಿದರು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ಮೂಡೇರ ಕಾಳಯ್ಯನವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು.