ಮಡಿಕೇರಿ, ಜೂ. ೬: ೨೦೨೧ ಫೆಬ್ರವರಿ ತಿಂಗಳಿಗೆ ಅವಧಿ ಮುಗಿದು, ಕಳೆದ ಎರಡು ವರ್ಷಗಳಿಂದ ಚುನಾವಣೆ ನಡೆಯದೆ ನೆನೆಗುದಿಗೆ ಬಿದ್ದಿದ್ದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ.

ಮೇ ೨೯ ರಿಂದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಹಾಗೂ ಮತ ಕೇಂದ್ರಗಳ ಸಿದ್ಧತೆಗೆ ಚುನಾವಣಾ ಆಯೋಗ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದೆ.

ಕಳೆದ ಎರಡು ವರ್ಷಗಳಿಂದ ಅಧಿಕಾರಿಗಳೇ ಆಡಳಿತ ನಡೆಸುತ್ತಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳು ಅಭಿವೃದ್ಧಿ ಕಾಣದೇ ಸಂಪೂರ್ಣ ನಿರ್ಲಕ್ಷö್ಯಕ್ಕೊಳಗಾಗಿದೆ.

ಈ ಹಿಂದೆ ಮೀಸಲಾತಿ ಹಾಗೂ ಕ್ಷೇತ್ರ ಪುನರ್‌ವಿಂಗಡಣೆ ನೆಪವೊಡ್ಡಿ ಚುನಾವಣೆಯನ್ನು ಈ ಹಿಂದಿನ ಸರ್ಕಾರ ಮುಂದೂಡಿತ್ತು. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳು ಗಡಿ ನಿರ್ಣಯ ಹಾಗೂ ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು, ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಿದ್ದರು.

ಈ ಸಂಬAಧ ಹೈಕೋರ್ಟ್ನಲ್ಲಿ ರಾಜ್ಯ ಸರ್ಕಾರ ಹಾಗೂ ಚುನಾವಣೆ ಆಯೋಗದ ನಡುವೆ ವಾದ-ಪ್ರತಿವಾದ ನಡೆಯುತ್ತಿದೆ. ಇದೀಗ ಚುನಾವಣೆ ನಡೆಸಲು ಸಿದ್ಧತೆ ನಡೆಸಲು ತಿಳಿಸಿರುವ ರಾಜ್ಯ ಚುನಾವಣಾ ಆಯೋಗ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ನಡೆಸುತ್ತಿದೆ.

ಮಿನಿ ಸಮರಕ್ಕೆ ಸಜ್ಜು: ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣೆ ನಡೆದು ಕೇವಲ ಒಂದು ತಿಂಗಳು ಕೂಡ ಮುಗಿದಿಲ್ಲ.

ಇದೀಗ ಮತ್ತೊಂದು ಚುನಾವಣೆಗೆ ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳು ಸಜ್ಜುಗೊಳ್ಳಬೇಕಿದೆ. ಕೊಡಗಿನಲ್ಲಿ ಕಳೆದೆರಡು ದಶಕಗಳ ಬಳಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಜಿಲ್ಲಾ ಪಂಚಾಯಿತಿ ಹಾಗೂ ಐದು ತಾಲೂಕು ಪಂಚಾಯಿತಿ ಅಧಿಕಾರವನ್ನು ಪಡೆಯಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲಾ ತಾಲೂಕು ಪಂಚಾಯಿತಿಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷವು ಮಿನಿ ಸಮರದಲ್ಲಿ ಅಧಿಕಾರ ಪಡೆಯಲು ಸನ್ನದ್ಧವಾಗುತ್ತಿದೆ. ಒಂದು ಹೆಜ್ಜೆ ಮುಂದಿಟ್ಟಿದೆ. ಕೊಡಗು ಜಿಲ್ಲೆಯಲ್ಲಿ ನೂತನವಾಗಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಶಾಸಕರಿಗೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ಅಧಿಕಾರ ಪಡೆಯುವುದು ಕೂಡ ಹೊಸ ಸವಾಲಾಗಿದೆ.

ವಿಧಾನಸಭಾ ಚುನಾವಣೆಯ ಸೋಲಿನ ಬಳಿಕ ಮಂಕಾಗಿರುವ ಬಿಜೆಪಿಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ದೊಡ್ಡ ಸವಾಲಾಗಿ ಪರಿಣಮಿಸುವುದಂತೂ ಖಚಿತ.

೨೦ ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೇ ಗೆಲುವು ಸಾಧಿಸಿದ್ದರಿಂದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಬಿಜೆಪಿ ಅಭ್ಯರ್ಥಿಗಳಿಗೆ ಆರ್ಥಿಕ ನೆರವು ಹಾಗೂ ಚುನಾವಣಾ ಪ್ರಚಾರದಲ್ಲಿ ಕೂಡ ಶಾಸಕರು ನೆರವಾಗುತ್ತಿದ್ದರು. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶಾಸಕರು ಪ್ರಮುಖ ಪಾತ್ರವಹಿಸುತ್ತಿದ್ದರು.

ಆದರೆ ಇದೀಗ ಕೊಡಗು ಜಿಲ್ಲೆಯ ಎರಡು ಕ್ಷೇತ್ರದಲ್ಲಿ ಬಿಜೆಪಿ ತಮ್ಮ ಶಾಸಕರನ್ನು ಕಳೆದುಕೊಂಡಿದ್ದಾರೆ. ಈ ಬಾರಿಯ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಶಾಸಕರೇ ಇರುವುದರಿಂದ ದೊಡ್ಡ ವರದಾನವಾಗಲಿದೆ. ಅದಲ್ಲದೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುವುದರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೇಕಾದ ರೀತಿಯಲ್ಲಿ ಮೀಸಲಾತಿ ಕೂಡ ನಿಗದಿಪಡಿಸುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಪಕ್ಷ ಇದೆ. - ಕೆ.ಎಂ. ಇಸ್ಮಾಯಿಲ್ ಕಂಡಕರೆ