ಸೋಮವಾರಪೇಟೆ, ಜೂ. ೬: ಪ್ರತಿಯೋರ್ವ ನಾಗರಿಕನೂ ಸಹ ಪರಿಸರ ರಕ್ಷಣೆಯ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಇಲ್ಲಿನ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಗೋಕುಲ್ ಅವರು ಕರೆ ನೀಡಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರವನ್ನು ನಾವು ರಕ್ಷಿಸಿದರೆ ಮಾತ್ರ ಪರಿಸರ ನಮ್ಮನ್ನು ರಕ್ಷಿಸುತ್ತದೆ ಎಂಬ ಜ್ಞಾನ ಇರಬೇಕು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಚಿಂತನೆ ಹರಿಸಬೇಕೆಂದು ನ್ಯಾಯಾಧೀಶರು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮಾತನಾಡಿ, ಜಾಗತಿಕ ತಾಪಮಾನವನ್ನು ಸುಸ್ಥಿರಗೊಳಿಸುವಲ್ಲಿ ಪರಿಸರದ ಪಾತ್ರ ಮಹತ್ತರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸಿಎಫ್ ಗೋಪಾಲ್, ಆರ್.ಎಫ್.ಓ. ಚೇತನ್, ಕಾಲೇಜು ಪ್ರಾಂಶುಪಾಲೆ ತಿಲೋತ್ತಮೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.