ಮಡಿಕೇರಿ, ಜೂ. ೯: ಕೊಡಗು ಜಿಲ್ಲೆಯಲ್ಲಿ ತಾ. ೧೨ ರಿಂದ ೧೯ ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ, ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢ ಶಾಲೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗ ಮತ್ತು ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶಿಸಿದ್ದಾರೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.
ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬAಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.