ಮಡಿಕೇರಿ, ಜೂ. ೧೨ : ಜಿಲ್ಲೆಯಲ್ಲಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡುಬAದಲ್ಲಿ ಹತ್ತಿರದ ಶಾಲೆಗೆ ಸೇರಿಸುವಂತಾಗ ಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ. ಪುಟ್ಟರಂಗಸ್ವಾಮಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-೧೦೯೮ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ನಡೆದ ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳು ಕುಟುಂಬದ ಬಡತನದಿಂದ ಶಾಲೆಗೆ ಹೋಗದೇ ಜೀವನೋಪಾಯಕ್ಕಾಗಿ ಕೆಲಸ ಮಾಡುತ್ತಾರೆ. ಇದನ್ನು ತಪ್ಪಿಸುವ ಉದ್ದೇಶಕ್ಕಾಗಿ ಸರ್ಕಾರ ೧೪ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ಜೊತೆಗೆ ವಿದ್ಯಾರ್ಥಿ ನಿಲಯ ಸೌಲಭ್ಯವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡುಬAದಲ್ಲಿ ಮನವರಿಕೆ ಮಾಡಿ ಶಾಲೆಗೆ ಹೋಗುವಂತೆ ತಿಳಿಸಬೇಕು. ಶಿಕ್ಷಣದಿಂದ ಯಾರೂ ಸಹ ವಂಚಿತರಾಗಬಾರದು. ಶಿಕ್ಷಣದಿಂದ ಮಾತ್ರ ಸಮಾಜ ಬದಲಾವಣೆ ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಈ ಬಗ್ಗೆ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಸಲಹೆಯಿತ್ತರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ವಿಶ್ವ ಬಾಲ ಕಾರ್ಮಿಕ ದಿನ ಪ್ರಯುಕ್ತ ಪ್ರಮಾಣ ವಚನ ಬೋಧಿಸಿ ಮಾತನಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಒದಗಿಸಬೇಕು. ಶಿಕ್ಷಣದ ಮಹತ್ವದ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವಂತಾಗಬೇಕು ಎಂದರು.
ಹಿರಿಯ ವಕೀಲರಾದ ಕೆ.ಆರ್.ವಿದ್ಯಾಧರ ಗೌಡ ಅವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮಕ್ಕಳು ಶಿಕ್ಷಣವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದರು. ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಂಡಲ್ಲಿ ೨೦ ರಿಂದ ೫೦ ಸಾವಿರ ರೂ. ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಮಾತನಾಡಿ ಮಕ್ಕಳ ಬಾಲ್ಯಾವಸ್ಥೆ ಸಂತಸದಿAದ ಕೂಡಿರಬೇಕು. ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು. ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಚೈಲ್ಡ್ಲೈನ್-೧೦೯೮ ನಿರ್ದೇಶಕರಾದ ವಿ.ಎಸ್.ರಾಯ್ ಡೇವಿಡ್ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಕೊನೆಯಾಗಬೇಕು. ಮಕ್ಕಳ ರಕ್ಷಣೆ, ಪೋಷಣೆಗೆ ಒತ್ತು ನೀಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಎಸ್.ಎಲ್.ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ದೊಡ್ಡೇಗೌಡ, ಉಪ ಪ್ರಾಂಶುಪಾಲರಾದ ನಳಿನಿ, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎA.ಯತ್ನಟ್ಟಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್ ಇತರರು ಇದ್ದರು.
ಕಾರ್ಮಿಕ ಇಲಾಖೆಯಿಂದ ಹೊರತಂದಿರುವ ಪೋಸ್ಟರ್ನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಡಿ.ಟಿ.ಪುಟ್ಟರಂಗಸ್ವಾಮಿ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಹಾಡು ಹಾಡಿದರು. ಚಿತ್ರಕಲೆ, ಭಾಷಣ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿ, ವಂದಿಸಿದರು.