ಮುಳ್ಳೂರು, ಜೂ. ೧೩: ಪರಿಸರ ದಿನಾಚರಣೆ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಮೀಪದ ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ನಾಗರಾಜ್ ಪರಿಸರ ಮಹತ್ವ ಕುರಿತು ಮಾಹಿತಿ ನೀಡಿದರು. ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿಸರ ಕಾರ್ಯಕ್ರಮದ ಕುರಿತು ಪ್ರಶಂಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಎಸ್‌ಡಿಎಂಸಿ ಅಧ್ಯಕ್ಷ ಮೋಹನ್, ಒಕ್ಕೂಟದ ಅಧ್ಯಕ್ಷೆ ಎಸ್.ಪಿ. ಭಾಗ್ಯ, ಎಸ್.ಆರ್. ಶೋಭಾವತಿ, ಎಸ್.ಪಿ. ದಿವ್ಯ ಶಾಲಾ ಶಿಕ್ಷಕರು ಹಾಜರಿದ್ದರು.

ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಗೀತೆ ಗಾಯನದ ಬಳಿಕ ಶಾಲೆಗೆ ಸೇರಿದ ಜಾಗದಲ್ಲಿ ಉಪಯುಕ್ತ ಗಿಡಗಳನ್ನು ನೆಡಲಾಯಿತು.