ಸೋಮವಾರಪೇಟೆ, ಜೂ. ೧೩: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ತಾಲೂಕಿನ ಶನಿವಾರಸಂತೆ ವಲಯದ ತ್ಯಾಗರಾಜ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ್ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ವಲಯದ ಮೇಲ್ವಿಚಾರಕ ನಾಗರಾಜ್ ಪರಿಸರ ಸಂರಕ್ಷಣೆಯಲ್ಲಿ ಮಾನವನ ಪಾತ್ರ ಪ್ರಮುಖವಾದದ್ದು ಎಂದು ತಿಳಿಸಿದರು. ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ದಿನೇಶ್, ಶಾಲಾ ಮುಖ್ಯೋಪಾಧ್ಯಾಯ ಪುಟ್ಟಸ್ವಾಮಿ ಪರಿಸರ ಉಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿದರು.
ಒಕ್ಕೂಟದ ಅಧ್ಯಕ್ಷೆ ಭಾಗ್ಯ, ಶಿಕ್ಷಕರು, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು. ಶಾಲಾ ಮಕ್ಕಳಿಂದ ಭಾಷಣ, ಪರಿಸರ ಗೀತೆ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸೇವಾ ಪ್ರತಿನಿಧಿ ಶೋಭಾವತಿ, ತಾಲೂಕು ಕೃಷಿ ಮೇಲ್ವಿಚಾರಕ ರಾಜಣ್ಣ ಕಾರ್ಯಕ್ರಮ ನಿರ್ವಹಿಸಿದರು.