ಪಠ್ಯ ಪುಸ್ತಕ ಪರಿಷ್ಕರಣೆ-ಮತಾಂತರ ಕಾಯ್ದೆ ತಿದ್ದುಪಡಿ-ಎಪಿಎಂಸಿ ಕಾಯ್ದೆ ರದ್ದುಪಡಿಸಲು ಸಚಿವ ಸಂಪುಟ ಅಸ್ತು

ಬೆಂಗಳೂರು, ಜೂ. ೧೫: ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲು ನಿರ್ಧರಿಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿ.ಆರ್. ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ. ಮಕ್ಕಳಿಗೆ ಈಗಾಗಲೇ ಪಠ್ಯ ಪುಸ್ತಕ ವಿತರಿಸಲಾಗಿದೆ. ಹೀಗಾಗಿ ಅವುಗಳನ್ನು ವಾಪಸ್ ಪಡೆದರೆ ಮತ್ತೆ ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತದೆ. ಹೀಗಾಗಿ ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಶಿಕ್ಷಣ ತಜ್ಞರ ಸಲಹೆ ಪಡೆದು ಸಪ್ಲಿಮೆಂಟರಿ ಪುಸ್ತಕ ನೀಡಲಾಗುತ್ತದೆ. ಇದರ ಜೊತೆಗೆ ಮಕ್ಕಳಿಗೆ ಯಾವ ಪಾಠ ಮಾಡಬೇಕು ಅನ್ನೋ ಮಾರ್ಗಸೂಚಿಯನ್ನು ಶಿಕ್ಷಕರಿಗೆ ನೀಡಲಾಗುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಕಾಂಗ್ರೆಸ್ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಕಾಂಗ್ರೆಸ್ ಸರ್ಕಾರ ಬಂದಿದೆ. ಅಲ್ಲದೇ ಮತಾಂತರ ನಿಷೇಧ ಕಾಯ್ದೆಗೂ ತಿದ್ದುಪಡಿ ತರಲು ಸಚಿವ ಸಂಪುಟ ಸಭೆ ತೀರ್ಮಾನ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯಲ್ಲಿ ಸೇರಿಸಿದ್ದ ಅಂಶಗಳನ್ನು ಕೈಬಿಟ್ಟು ತಿದ್ದುಪಡಿ ಮಾಡಲು ನಿರ್ಧಾರ ಮಾಡಲಾಗಿದ್ದು, ಜುಲೈ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆ ಮಾಡಲು ನಿರ್ಧರಿಸಲಾಗಿದೆ.

೯೪ ಸಾವಿರ ಮಂದಿ ಸ್ಥಳಾಂತರ

ಕಚ್, ಜೂ. ೧೫: ಗುಜರಾತ್‌ನತ್ತ ಬಿಪರ್ಜೋಯ್ ಚಂಡಮಾರುತ ಧಾವಿಸುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಅಪಾಯ ಪ್ರದೇಶಗಳಲ್ಲಿರುವ ಸುಮಾರು ೯೪ ಸಾವಿರ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ತಾ. ೧೬ ರಂದು ಗುಜರಾತ್ ಕರಾವಳಿಗೆ ಅಪ್ಪಳಿಸುವ ಸಂಭವನೀಯ ಚಂಡಮಾರುತದ ಪರಿಣಾಮವಾಗಿ ಉತ್ತರ ಗುಜರಾತ್‌ನ ಬನಸ್ಕಾಂತ ಮತ್ತು ಪಟಾನ್‌ನಂತಹ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬAಧಪಟ್ಟ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಬಿರುಗಾಳಿ ಮತ್ತು ಭಾರಿ ಮಳೆಗೆ ರಾಜ್ಯಾದ್ಯಂತ ೪೦೦ ಮರಗಳು ಧರೆಗುರುಳಿದ್ದು, ಮರಗಳನ್ನು ತೆಗೆದು ರಸ್ತೆಗಳನ್ನು ದುರಸ್ತಿ ಮಾಡಲಾಗಿದೆ. ಗುಜರಾತ್‌ನಲ್ಲಿ ೧೮ ಎನ್‌ಡಿಆರ್‌ಎಫ್ ತಂಡಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದಾರೆ ಮತ್ತು ಉದ್ಭವಿಸಬಹುದಾದ ಯಾವುದೇ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಸ್ಪಂದಿಸಲು ಸಿದ್ಧರಾಗಿದ್ದಾರೆ ಎಂದು ಸ್ಥಳೀಯ ಜಿಲ್ಲಾಡಳಿತ ಹೇಳಿದೆ.

‘ಗೃಹಲಕ್ಷಿö್ಮ’ ಯೋಜನೆಗೆ ಇಂದಿನಿAದ ಅರ್ಜಿ ಸಲ್ಲಿಕೆ ಆರಂಭ

ಬೆAಗಳೂರು, ಜೂ. ೧೫: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷಿö್ಮ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷಿö್ಮ ಹೆಬ್ಬಾಳ್ಕರ್ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ಆಫ್‌ಲೈನ್ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು. ಮಧ್ಯಾಹ್ನ ೧.೩೦ಕ್ಕೆ ‘ಗೃಹಲಕ್ಷಿö್ಮ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್‌ಪೋರ್ಟಲ್ ಸಿಎಂರಿAದ ಲಾಂಚ್ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ಅವರು ಹೇಳಿದರು. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ ಎಂದರು.

ಸಾರಿಗೆ ನೌಕರರ ವೇತನ ಶೇ. ೧೫ ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ಜೂ. ೧೫: ಸಾರಿಗೆ ನೌಕರರ ವೇತನವನ್ನು ಶೇ. ೧೫ ರಷ್ಟು ಹೆಚ್ಚಳ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಪ್ರಿಲ್ ತಿಂಗಳಿAದ ಪೂರ್ವಾನ್ವಯವಾಗುವಂತೆ ಸಾರಿಗೆ ನೌಕರರ ವೇತನವನ್ನು ಶೇ. ೧೫ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ. ಕಳೆದ ಮಾರ್ಚ್ನಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ, ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರ ವೇತನವನ್ನು ಶೇ. ೧೫ ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.

ಸಂವಿಧಾನದ ಪೀಠಿಕೆ ಓದು ಕಡ್ಡಾಯಗೊಳಿಸಿದ ಸರ್ಕಾರ

ಬೆಂಗಳೂರು, ಜೂ. ೧೫: ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳು ಸಂವಿಧಾನದ ಪೀಠಿಕೆಯನ್ನು ಪ್ರತಿದಿನ ಕಡ್ಡಾಯವಾಗಿ ಓದಬೇಕು ಮತ್ತು ಎಲ್ಲಾ ಸರ್ಕಾರಿ ಕಚೇರಿ, ಇಲಾಖೆಗಳಲ್ಲೂ ಸಂವಿಧಾನದ ಪೀಠಿಕೆಯ ಫೋಟೋ ಹಾಕಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪೀಠಿಕೆಯ ಭಾವಚಿತ್ರವನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ. ಇಂತಹ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ನಮ್ಮ ಯುವಕರು ಪ್ರತಿ ದಿನ ಅದರ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಮತ್ತು ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ಅದರ ಭಾವಚಿತ್ರವನ್ನು ಪ್ರದರ್ಶಿಸಬೇಕು ಎಂದಿದ್ದಾರೆ. ಸಂವಿಧಾನದ ಆಶಯಗಳನ್ನು, ಸಂವಿಧಾನದ ರಚನೆಯ ಮೂಲ ಉದ್ದೇಶಗಳನ್ನು ತಿಳಿಯಲು ಹಾಗೂ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಕಾಣಲು ಅನುವು ಮಾಡಿಕೊಡಲು ಎಲ್ಲಾ ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಮತ್ತು ಸರ್ಕಾರಿ ಕಚೇರಿಯಲ್ಲಿ ಕಡ್ಡಾಯವಾಗಿ ಸಂವಿಧಾನದ ಪೀಠಿಕೆಯ ಭಾವಚಿತ್ರ ಹಾಕಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.