ವೀರಾಜಪೇಟೆ, ಜೂ. ೨೪: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರನ್ನು ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು. ಬಾಳುಗೋಡು ಕೊಡವ ಸಮಾಜದಲ್ಲಿ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗಿನ ಪ್ರತಿಭಾವಂತ ಯುವ ಮುಖಂಡ, ಕ್ಷೇತ್ರದಿಂದ ಆಯ್ಕೆಯಾಗಿ ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಆಯ್ಕೆಯಾಗಿರುವುದು ಕೊಡಗಿಗೆ ಹೆಮ್ಮೆಯ ವಿಷಯ ಎಂದರು.
ಇದೇ ಸಂದರ್ಭ ಬಾಳುಗೋಡಿನ ಕೊಡವ ಸಮಾಜಗಳ ಒಕ್ಕೂಟದ ಮೈದಾನದ ಅಭಿವೃದ್ಧಿ ಹಾಗೂ ಕ್ರೀಡಾಪಟುಗಳಿಗೆ ಹಾಸ್ಟೆಲ್ ವ್ಯವಸ್ಥೆ ಸೇರಿದಂತೆ ಒಕ್ಕೂಟದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕೊಡಗಿನ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವುದಾಗಿ ಹಾಗೂ ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡುವುದಾಗಿ ಹೇಳಿದರು. ಅಲ್ಲದೆ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಒಕ್ಕೂಟದ ಉಪಾಧ್ಯಕ್ಷರುಗಳಾದ ಮಾಳೇಟಿರ ಅಭಿಮನ್ಯು ಕುಮಾರ್, ಮಂಡುವAಡ ಮುತ್ತಪ್ಪ, ಗೌರವಾಧ್ಯಕ್ಷ ಪರದಂಡ ಸುಬ್ರಮಣಿ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಲ್ಲಣಮಡ ರೀಟಾ ದೇಚಮ್ಮ, ಆದೇಂಗಡ ಸರೋಜ, ಅಪ್ಪುಮಣಿಯಂಡ ಶೈಲಾ, ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಸೇರಿದಂತೆ ಇತರರು ಹಾಜರಿದ್ದರು.