ಮಡಿಕೇರಿ, ಜೂ. ೨೫: ಶಿಕ್ಷಣ ಇಲಾಖೆ, ಇತಿಹಾಸ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಸರ್ಕಾರಿ ಪ್ರಾಚ್ಯ ವಸ್ತು ಸಂಗ್ರಹಾಲಯ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚೀನ ನಾಣ್ಯಗಳ ಪ್ರದರ್ಶನ ಮತ್ತು ಇತಿಹಾಸದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಇತಿಹಾಸ ಉಪನ್ಯಾಸಕಿ ಡಾ. ರಾಧಿಕಾ, ಪ್ರಸ್ತುತ ಕಾಲಘಟ್ಟದಲ್ಲಿ ಇತಿಹಾಸವು ಎಡ ಹಾಗೂ ಬಲಪಂಥದ ನಡುವೆ ಸಿಕ್ಕಿ ಸ್ಥಿತ್ಯಂತರಕ್ಕೆ ಒಳಗಾಗುತ್ತಿದೆ. ಹಾಗಾಗಿ ವಿದ್ಯಾರ್ಥಿ ಗಳು ನೈಜ ಇತಿಹಾಸದ ಕುರಿತು ಗಮನ ಹರಿಸಬೇಕು ಮತ್ತು ಬೋಧಕ ವರ್ಗ ನೈಜ ಇತಿಹಾಸವನ್ನು ಬೋಧಿಸಬೇಕು ಎಂಬುದಾಗಿ ಸಲಹೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚೀನ ನಾಣ್ಯಗಳ ಸಂಗ್ರಹಕ ಪಿ.ಕೆ. ಕೇಶವಮೂರ್ತಿ ಅವರು, ವಿದ್ಯಾರ್ಥಿ ದಿಸೆಯಲ್ಲಿ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು. ಹವ್ಯಾಸಗಳು ವಿದ್ಯಾರ್ಥಿಯನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ನಿರ್ಮಲ ಕೆ.ಡಿ. ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮಡಿಕೇರಿಯ ಸರ್ಕಾರಿ ಪ್ರಾಚ್ಯ ವಸ್ತು ಸಂಗ್ರಹಾಲಯದ ಕ್ಯುರೇಟರ್ ಆಗಿರುವ ರೇಖಾ ಅವರು ಪ್ರಾಚೀನ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧÀಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ರೀನಾ ಕಾರ್ಯಕ್ರಮ ನಿರೂಪಿಸಿ, ದೀಕ್ಷಿತ್ ವಂದಿಸಿದರು. ಉಪನ್ಯಾಸ ಕಾರ್ಯಕ್ರಮದ ನಂತರ ಕಾಲೇಜು ಸಭಾಂಗಣದಲ್ಲಿ ಪ್ರಾಚೀನ ನಾಣ್ಯಗಳ ಪ್ರದರ್ಶನ ನಡೆಯಿತು.