ಕರಿಕೆ, ಜು. ೫: ಕರಿಕೆ ಗ್ರಾಮದಲ್ಲಿ ಇಲಿ ಜ್ವರ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ಮೃತನ ಮರಣೋತ್ತರ ಪರೀಕ್ಷಾ ವರದಿ ಪರಿಶೀಲಿಸಲಾಗುತ್ತಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ತಾನು ಶೀಘ್ರವಾಗಿ ಕರಿಕೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಎಂಟು ಇಲಿ ಜ್ವರ ಪ್ರಕರಣ ಪತ್ತೆಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಇದು ಪ್ರಥಮ ಸಾವು ಆಗಿದ್ದು, ಇಲಿ ಜ್ವರದಿಂದಲೋ ಅಥವಾ ಬೇರೆ ಕಾರಣವೋ ಎಂದು ದೃಢೀಕರಿಸಬೇಕಾಗಿದೆ. ಗ್ರಾಮಸ್ಥರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.