ಮಡಿಕೇರಿ, ಜು. ೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್‌ರಾಂ ಅವರ ೩೭ನೇ ಪರಿನಿರ್ವಾಣ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ಹಸಿರು ಕ್ರಾಂತಿ ಜಾರಿಗೊಳಿಸಿದರು.

ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟçದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ನುಡಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಸಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಾಷಾ, ಇತರರು ಇದ್ದರು.