ಕುಶಾಲನಗರ, ಜು. ೧೬: ಯುವ ಪೀಳಿಗೆ ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಕರೆ ನೀಡಿದ್ದಾರೆ.
ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಇಕೋ ಕ್ಲಬ್ ಸಹಯೋಗದೊಂದಿಗೆ ನಡೆದ ಅಂರ್ರಾಷ್ಟಿçÃಯ ಮಾದಕ ವಸ್ತು ವಿರೋಧಿ ದಿನಾಚರಣೆ ಮತ್ತು ವಿಶ್ವ ಜನಸಂಖ್ಯಾ ನಿಯಂತ್ರಣ ದಿನಾಚರಣೆ ಕುರಿತು ನಡೆದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಯುವಕರೇ ನಮ್ಮ ದೇಶದ ಸಂಪತ್ತಾಗಿದ್ದು ಪ್ರತಿಯೊಬ್ಬರೂ ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ ಎಂದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಕುಶಾಲನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಗೀತಾ ಅವರು ಮಕ್ಕಳಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಒದಗಿಸಿದರು. ಮಾದಕ ವಸ್ತುಗಳ ಮಾರಾಟ, ಸಾಗಾಟ ಇದರಿಂದ ಅವರ ಮೇಲೆ ಉಂಟಾಗುವ ಕಾನೂನು ಕ್ರಮಗಳ ಬಗ್ಗೆ ವಿವರಿಸಿದರು. ಉಪ ಪ್ರಾಂಶುಪಾಲ ಪರಮೇಶ್ವರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್, ಶಿಕ್ಷಕರಾದ ದಿನೇಶ್ ಅವರು ಮಾತನಾಡಿದರು.
ಈ ಸಂದರ್ಭ ಶಿಕ್ಷಕ ಮಂಜುನಾಥ್, ಸದಸ್ಯರು ಸೇವಾ ಪ್ರತಿನಿಧಿಗಳು ಇದ್ದರು. ಶಿಕ್ಷಕಿ ಕಮಲ ಸ್ವಾಗತಿಸಿ, ಯೋಜನೆಯ ವಲಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು. ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಪಾರ್ವತಿ ಪ್ರಾರ್ಥಿಸಿದರು. ಶಿಕ್ಷಕಿ ರಶ್ಮಿ ಕಾರ್ಯಕ್ರಮ ನಿರೂಪಿಸಿದರು.