ಪೊನ್ನಂಪೇಟೆ, ಜು. ೧೭: ಗೋಣಿಕೊಪ್ಪಲು ಕಾವೇರಿ ಎಜುಕೇಶನ್ ಸೊಸೈಟಿಯ ಸ್ಥಾಪಕ ನಿರ್ದೇಶಕ ಪೋಡಮಾಡ ಕೆ. ಚಿಣ್ಣಪ್ಪ ಅವರನ್ನು ವೀರಾಜಪೇಟೆ ಕಾವೇರಿ ಕಾಲೇಜು ವತಿಯಿಂದ ಅವರ ಮನೆಗೆ ತೆರಳಿ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಚಿಣ್ಣಪ್ಪ ಅವರು, ಗೋಣಿಕೊಪ್ಪಲು ಮತ್ತು ವೀರಾಜಪೇಟೆ ಕಾವೇರಿ ಕಾಲೇಜು ದಕ್ಷಿಣ ಕೊಡಗಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಆಶಾಕಿರಣವಾಗಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ಬಹುತೇಕ ವಿದ್ಯಾರ್ಥಿಗಳು ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಕಾವೇರಿ ಕಾಲೇಜು ಶೈಕ್ಷಣಿಕ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಯಶಸ್ಸು ಸಾಧಿಸುತ್ತಾ ಮುನ್ನಡೆಯುತ್ತಿರುವುದು ಸಂತಸ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಗೋಣಿಕೊಪ್ಪಲು ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪ್ರೊ. ಇಟ್ಟೀರ ಕೆ. ಬಿದ್ದಪ್ಪ, ನಿವೃತ್ತ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ, ವೀರಾಜಪೇಟೆ ಕಾವೇರಿ ಕಾಲೇಜು ಪ್ರಾಂಶುಪಾಲ ಡಾ. ಆನಂದ ಕಾರ್ಲ, ಐಕ್ಯೂಎಸಿ ಸಂಚಾಲಕಿ ಡಾ. ಕೆ.ಜಿ. ವೀಣಾ ಹಾಗೂ ಚಿಣ್ಣಪ್ಪ ಅವರ ಕುಟುಂಬಸ್ಥರು ಹಾಜರಿದ್ದರು.