ಕೂಡಿಗೆ, ಜು. ೨೧: ವಿದ್ಯಾರ್ಥಿಗಳು ಸೋಲು-ಗೆಲುವಿನ ಕಡೆಗೆ ಗಮನ ಕೊಡದೇ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಕ್ರೀಡಾಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂ. ಆಲೂರ ಅವರು ಕರೆ ನೀಡಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿನ ವಿಜ್ಞಾನ ಸಂಕೀರ್ಣದಲ್ಲಿ ಒಳಾಂಗಣದಲ್ಲಿ ಹಮ್ಮಿಕೊಂಡಿದ್ದ ೨೦೨೨-೨೦೨೩ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಅವರು, ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಮಾನಸಿಕ ಆರೋಗ್ಯಕ್ಕಾಗಿ ಹೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ದೈಹಿಕವಾಗಿ ಆರೋಗ್ಯವಂತರಾಗಿದ್ದಾಗ ಅಧ್ಯಯನದ ಮೇಲೆ ಸುಲಭವಾಗಿ ಗಮನಹರಿಸಬಹುದು. ಆತ್ಮವಿಶ್ವಾಸ, ಮಾನಸಿಕ ಜಾಗರೂಕತೆಯನ್ನು ಹೆಚ್ಚಿಸಿಕೊಳ್ಳಲು ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಸಂದರ್ಭ ಕೊಡಗು ವಿಶ್ವವಿದ್ಯಾಲಯ ಕುಲಸಚಿವ ಡಾ. ಸೀನಪ್ಪ ಅವರು ಮತ್ತು ಪ್ರಭಾರ ನಿರ್ದೇಶಕ ಪ್ರೊ. ಕೆ.ಕೆ. ಧರ್ಮಪ್ಪ ವಿವಿಧ ವಿಭಾಗದ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.