ಮಡಿಕೇರಿ, ಜು. ೨೨: ಕರ್ನಾಟಕ ವಿಧಾನಸಭೆಯಲ್ಲಿ ೧೦ ಬಿಜೆಪಿ ಶಾಸಕರ ಅಮಾನತ್ತು, ತರಕಾರಿ ಬೆಲೆ ಏರಿಕೆ ಹಾಗೂ ಬೆಂಗಳೂರಿನಲ್ಲಿ ಶಂಕಿತ ಉಗ್ರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳದಿರುವುದನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾವಣೆಗೊಂಡ ಪಕ್ಷದ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಮಾತನಾಡಿ, ಸರಕಾರದ ವಿರುದ್ಧ ಪ್ರಶ್ನಿಸಿರುವುದನ್ನು ಮುಂದಿಟ್ಟು ಬಿಜೆಪಿಯ ಶಾಸಕರನ್ನು ಕಲಾಪದಿಂದ ಅಮಾನತ್ತು ಮಾಡಿರುವುದು ಸರಿಯಲ್ಲ. ಇದು ಸ್ಪೀಕರ್ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರನ್ನು ಮಾರ್ಷಲ್‌ಗಳ ಮೂಲಕ ಹೊತ್ತೊಯ್ದು ಹೊರಹಾಕಿರುವುದು ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಹಿಂದೂ ವಿರೋಧಿ ನೀತಿ ಅನುಸರಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸೆರೆಸಿಕ್ಕ ಶಂಕಿತ ಉಗ್ರರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಜೈನಮುನಿ ಹತ್ಯೆ ಪ್ರಕರಣದ ಸತ್ಯಾಂಶ ಬಯಲುಮಾಡುವಲ್ಲಿಯೂ ಸರಕಾರ ವೈಫಲ್ಯ ಸಾಧಿಸಿದೆ. ಐಎಎಸ್ ಅಧಿಕಾರಿಗಳನ್ನು ರಾಜಕೀಯ ನಾಯಕರ ಬೆಂಗಾವಲುಗಾರರಾಗಿ ಸರಕಾರ ಮಾಡಿದೆ ಎಂದು ಟೀಕಿಸಿದ ಅವರು, ಬೆಲೆ ಏರಿಕೆ ಮೂಲಕ ಜನರ ಮೇಲೆ ಸರಕಾರ ಬರೆ ಎಳೆದಿದೆ. ೨೦೦ ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆ ವಿಧಾನ ಪರಿಷತ್ತು ಮಾಜಿ ಸದಸ್ಯ ಮಂಡೇಪAಡ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಪಂಡ ರವಿಕಾಳಪ್ಪ, ಕಾರ್ಯದರ್ಶಿ ಕುಂಞAಗಡ ಅರುಣ್ ಭೀಮಯ್ಯ, ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್, ಕೃಷಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ನಗರ ಬಿಜೆಪಿ ಅಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಬಿ.ಕೆ. ಜಗದೀಶ್, ಯುವಮೋರ್ಚಾ ನಗರಾಧ್ಯಕ್ಷ ನವೀನ್ ಪೂಜಾರಿ, ಜಿಲ್ಲಾ ವಕ್ತಾರ ಮಹೇಶ್ ಜೈನಿ, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.