ಮಡಿಕೇರಿ, ಜು. ೨೨: ಮಣಿಪುರದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದ ಘಟನೆ ಖಂಡಿಸಿ ವಿಮೆನ್ ಇಂಡಿಯಾ ಮೂಮೆಂಟ್ ಸಂಘಟನೆ ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗಿ ಜನರು ಜೀವ ಭಯದಲ್ಲಿದ್ದಾರೆ. ಈ ಸಂದರ್ಭ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇದನ್ನು ಹತ್ತಿಕ್ಕಲು ಕೇಂದ್ರ ಸರಕಾರ ವಿಫಲವಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಸಂಘಟನೆ ರಾಜ್ಯ ಪ್ರಧಾನ ಕಾರ್ಯದರ್ಶಿ ತನುಜಾವತಿ ಮಾತನಾಡಿ, ಮಹಿಳೆಯನ್ನು ಬೆತ್ತಲೆಗೊಳಿಸಿ ರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ ಮಾಡಿರುವುದನ್ನು ತಡೆದು ರಕ್ಷಣೆ ನೀಡಲು ಪೊಲೀಸರು ಮುಂದೆ ಬಂದಿಲ್ಲ. ಇದು ಸರಕಾರಗಳಿಗೆ ನಾಚಿಕೆಗೇಡಿನ ಸಂಗತಿ. ಈ ಪ್ರಕರಣದಿಂದ ಸರಕಾರ ಬೆತ್ತಲಾಗಿದೆ. ಕೇಂದ್ರ ಮಧ್ಯ ಪ್ರವೇಶಿಸಿ ರಾಜ್ಯ ಸರಕಾರವನ್ನು ವಜಾಗೊಳಿಸಿ ಶಾಂತಿ ನೆಲೆಸುವಂತೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯೆ ಮೇರಿ ವೇಗಸ್, ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಸೆಲಿಕತ್, ಸೌದ, ಅಜ್ಮಿಲಾ, ಸಂಶುನ್ನೀಸ, ಜೆಸಿಲಾ, ತಾಹಿರಾ, ಪೌಜಿಯಾ ಸೇರಿದಂತೆ ಇನ್ನಿತರರು ಹಾಜರಿದ್ದರು.