ಸಿದ್ದಾಪುರ, ಜು. ೨೨: ವೀರಾಜಪೇಟೆ ತಹಶೀಲ್ದಾರ್ ರಾಮಚಂದ್ರ ಅವರು ಗಾಳಿ, ಮಳೆ ಹಿನ್ನೆಲೆಯಲ್ಲಿ ತಾಲೂಕು ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದೆರಡು ದಿನಗಳಿಂದ ಗಾಳಿ ಮಳೆಗೆ ಕಾವಾಡಿ ಗ್ರಾಮದಲ್ಲಿ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಅದನ್ನು ಚೆಸ್ಕಾಂ ಸಿಬ್ಬಂದಿ ದುರಸ್ತಿ ಪಡಿಸಿದ್ದು, ವಿದ್ಯುತ್ ಸಮಸ್ಯೆ ಬಗೆಹರಿದಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಈಗಾಗಲೇ ಅಮ್ಮತ್ತಿ ಹೋಬಳಿಯ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳ ನದಿ ತೀರದ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಕಂದಾಯ ಇಲಾಖೆ ವತಿಯಿಂದ ನೋಟೀಸ್ ಜಾರಿ ಮಾಡಲಾಗಿದೆ. ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ ನೀಡಲಾಗಿದೆ.