ಮಡಿಕೇರಿ, ಜು. ೨೫: ಕೊಡಗು ಜಿಲ್ಲೆಯಲ್ಲಿ ೨೦೧೮ರಿಂದ ಈಚೆಗೆ ಪ್ರಾಕೃತಿಕ ವಿಕೋಪ ಆಗಿಂದಾಗ್ಗೆ ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಜನತೆ ಮಳೆಗಾಲದಲ್ಲಿ ಆತಂಕಕ್ಕೆ ಒಳಗಾಗುತ್ತಾರೆ. ಆದ್ದರಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಜನರಿಗೆ ಧೈರ್ಯ ತುಂಬುವುದರ ಜೊತೆಗೆ ಬದ್ಧತೆಯಿಂದ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದು ರಾಜ್ಯ ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಸೂಚನೆ ನೀಡಿದರು.
ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಕೊಡಗಿನ ಪ್ರಸ್ತುತ ಸನ್ನಿವೇಶದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಅಧಿಕಾರಿಗಳು ಉದಾಸೀನ ಮನೋಭಾವ ಬದಿಗಿಟ್ಟು ಕೆಲಸ ಮಾಡಬೇಕು. ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅಂತಹ ಅನಾಹುತಗಳು ಸಂಭವಿಸಿದಾಗ ಅಧಿಕಾರಿಗಳು ಜನರ ಜೊತೆ ನಿಲ್ಲಬೇಕು. ಗ್ರಾಮ ಲೆಕ್ಕಾಧಿಕಾರಿಯಿಂದ ಜಿಲ್ಲಾಧಿಕಾರಿವರೆಗೆ ಎಲ್ಲಾ ಅಧಿಕಾರಿಗಳು ಮಳೆಗಾಲದಲ್ಲಿ ಏನೇ ಸಂಕಷ್ಟ ಎದುರಾದರೂ ಅದನ್ನು ಎದುರಿಸಲು ಸನ್ನದ್ಧರಾಗಿರಬೇಕು. ನಿರ್ಲಕ್ಷö್ಯ ಮನೋಭಾವ ತೋರಿದರೆ ತಾನು ಸಹಿಸುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದರು.
ಕಾಮಗಾರಿ ಆಗದ ಬಗ್ಗೆ ಅಸಮಾಧಾನ
ಪ್ರಾಕೃತಿಕ ವಿಕೋಪ ಕಾಮಗಾರಿಗಳು ಆಗದ ಬಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಪಿಆರ್‌ಇಡಿ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಪರಿಶೀಲಿಸಿ ಸಂಬAಧಿಸಿದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಯಾವುದಾದರು ಕೆಲಸ ಆರಂಭವಾಗದಿದ್ದರೆ ಅಂತವುಗಳ ಗುತ್ತಿಗೆ
(ಮೊದಲ ಪುಟದಿಂದ) ರದ್ದುಪಡಿಸುವಂತೆ ನಿರ್ದೇಶನ ನೀಡಿದರು. ಇಲಾಖೆಗಳ ಇಂತಹ ಕಾರ್ಯವೈಖರಿಯಿಂದ ಸರ್ಕಾರಕ್ಕೂ ಕೆಟ್ಟ ಹೆಸರು ಬರುತ್ತದೆ. ಈ ರೀತಿ ಆಗಬಾರದು ಎಂದು ಸಚಿವರು ನುಡಿದರು. ಉಸ್ತುವಾರಿ ಸಚಿವ ಬೋಸರಾಜು ಅವರು ಕೂಡ ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಮಾತನಾಡಿ ಕುಶಾಲನಗರ ಸಾಯಿ ಬಡಾವಣೆಯಲ್ಲಿ ಪ್ರವಾಹ ಉಂಟಾಗಿದ್ದು, ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ ಬಿರುನಾಣಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಈ ಬಗ್ಗೆ ಕೂಡಲೇ ಕ್ರಮವನ್ನು ತೆಗೆದುಕೊಳ್ಳಬೇಕು. ಮಾನವ ಸಂಪನ್ಮೂಲ ಬೇಕಿದ್ದರೆ ಮಾಹಿತಿ ನೀಡಬೇಕು. ಜನರು ನಮಗೆ ಕರೆ ಮಾಡುವಂತೆ ಮಾಡಬೇಡಿ ಎಂದು ಹೇಳಿದರು.
ಸೆಸ್ಕ್ ಕಾರ್ಯಪಾಲಕ ಅಭಿಯಂತರರಾದ ಅನಿತಾ ಬಾಯಿ ಮಾತನಾಡಿ ನಾಪೋಕ್ಲು ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಯಿಂದಾಗಿ ಕೊಡಗಿನಲ್ಲಿ ೧.೩೫ ಕೋಟಿ ನಷ್ಟವಾಗಿದೆ. ಸೆಸ್ಕಾಂಗೆ ಸಿಬ್ಬಂದಿ ಕೊರತೆ ಇದ್ದು, ಈ ಬಗ್ಗೆ ಮೇಲಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಪ್ರಸ್ತುತ ಇರುವಂತಹ ಸಿಬ್ಬಂದಿಗಳು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಮಡಿಕೇರಿ ಕ್ಷೇತ್ರದ ಶಾಸಕ ಸೋಮವಾರಪೇಟೆ ತಾಲೂಕಿನ ಕೊತ್ನಳ್ಳಿ, ಕುಂದಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಇದೆ ಎಂದು ಹೇಳಿದರು.
ಶಾಸಕ ಮಂಥರ್ ಗೌಡ ಮಾತನಾಡಿ ಶನಿವಾರ ಹಾಗೂ ಭಾನುವಾರ ಜಿಲ್ಲಾಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರುವುದಿಲ್ಲ. ಅಧಿಕಾರಿಗಳು ಕಚೇರಿಗೆ ಬರುವುದು ತಡವಾಗುತ್ತಿದೆ. ಇದರಿಂದ ಸಮಸ್ಯೆ ಆಗುತ್ತಿದೆ ಎಂದು ಹೇಳಿದರು. ಇದಕ್ಕೆ ಧ್ವನಿಗೂಡಿಸಿ ಕಂದಾಯ ಸಚಿವರು ಅಧಿಕಾರಿಗಳು ಇಂತಹ ಸಂಕಷ್ಟದ ಸಂದರ್ಭ ಕೇಂದ್ರ ಸ್ಥಾನದಲ್ಲಿದ್ದು ಕೆಲಸ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಕೊಡಗಿನ ಪ್ರಸ್ತುತ ಸನ್ನಿವೇಶದ ಕುರಿತು ಸಚಿವರುಗಳಿಗೆ ಪಿಪಿಟಿ ಮೂಲಕ ಮಾಹಿತಿ ನೀಡಿದರು. ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಕಂದಾಯ ಆಯುಕ್ತರಾದ ಸುನಿಲ್ ಮತ್ತಿತರರು ಉಪಸ್ಥಿತರಿದ್ದರು.
‘ಶಾಶ್ವತ ಪರಿಹಾರಕ್ಕೆ ಕಂದಾಯ
ಇಲಾಖೆಯಿಂದ ಅನುದಾನ ನೀಡಲು ಸಿದ್ಧ’
ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಬಹುದಾದ ಜಾಗಗಳನ್ನು ಗುರುತಿಸಿ ಜಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ ಈಗಾಗಲೇ ವರದಿ ನೀಡಿದೆ. ಆ ವರದಿ ಅನ್ವಯ ವೈಜ್ಞಾನಿಕವಾಗಿ ಕಾಮಗಾರಿಗಳನ್ನು ಕೈಗೊಂಡು ಭೂಕುಸಿತವಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಿದರೆ ಹದಿನೈದರಿಂದ ಇಪ್ಪತ್ತು ಕೋಟಿ ಅನುದಾನವನ್ನು ಕಂದಾಯ ಇಲಾಖೆಯಿಂದ ನೀಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೊಡಗಿನ ಹಲವು ಪ್ರದೇಶಗಳಿಗೆ ಇಂದು ಉಸ್ತುವಾರಿ ಸಚಿವ ರೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಮಳೆಯಿಂದ ಅಲ್ಲಲ್ಲಿ ಹಾನಿಗಳಾಗಿವೆ ಹೊರತು ವ್ಯಾಪಕ ಹಾನಿ ಕಂಡು ಬಂದಿಲ್ಲ.
(ಮೊದಲ ಪುಟದಿಂದ) ಯಾವುದೇ ಸಂಕಷ್ಟದ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಎನ್‌ಡಿಆರ್‌ಎಫ್ ಸೇರಿದಂತೆ ಪ್ರಾಕೃತಿಕ ವಿಕೋಪ ಎದುರಿಸಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಯಾವುದೇ ರೀತಿಯ ಸಹಕಾರ ಬೇಕಿದ್ದರೂ ಸರ್ಕಾರ ನೀಡಲು ಸಿದ್ಧವಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು. ಜಿಲ್ಲಾಧಿಕಾರಿ ಖಾತೆಯಲ್ಲಿ ೫೪ ಕೋಟಿ ಹಣವಿದ್ದು, ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಬಳಸಿಕೊಳ್ಳಬಹುದಾಗಿದೆ. ಹೆಚ್ಚುವರಿ ಅನುದಾನ ಬೇಕಿದ್ದರೂ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ವಿದ್ಯುತ್ ಸಮಸ್ಯೆ ಬಗ್ಗೆ ದೂರುಗಳಿದ್ದು, ಈ ಸಂಬAಧ ಸೆಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ತಾ.೨೬ರಂದು ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ನುಡಿದರು. ಈ ಸಂದರ್ಭ ಉಸ್ತುವಾರಿ ಸಚಿವ ಬೋಸರಾಜು, ಶಾಸಕರುಗಳಾದ ಎ.ಎಸ್. ಪೊನ್ನಣ್ಣ, ಡಾ. ಮಂಥರ್‌ಗೌಡ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತಿತರರಿದ್ದರು.