ಕೂಡಿಗೆ, ಜು. ೨೫: ಕೊಡಗು ವಿಶ್ವವಿದ್ಯಾಲಯಕ್ಕೆ ಬೇಕಾಗಿರುವ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಾ. ಮಂಥರ್ಗೌಡ ಅವರು ಭರವಸೆ ನೀಡಿದರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣಕ್ಕೆ ಭೇಟಿ ನೀಡಿದ ಅವರು, ನೂತನವಾಗಿ ಆರಂಭವಾಗಿರುವ ವಿಶ್ವ ವಿದ್ಯಾಲಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ತಿಳಿಸಿದರು. ಜಿಲ್ಲೆಗೆ ಹೆಮ್ಮೆ ತರುವಂತಹ ರೀತಿಯಲ್ಲಿ ಈ ವಿಶ್ವ ವಿದ್ಯಾಲಯವು ಅಂರ್ರಾಷ್ಟಿçÃಯ ಮಟ್ಟದಲ್ಲಿ ಬೆಳೆಯಬೇಕು. ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿ ಗಳಿಗೆ ಮುಂದಿನ ದಿನಗಳಲ್ಲಿ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜನೆ ಮಾಡುವ ಮೂಲಕ ಉದ್ಯೋಗ ಅವಕಾಶಗಳನ್ನು ಕಲ್ಪಿಸಿ ಕೊಡಲಾಗುವುದು. ವಿವಿಯ ಎಲ್ಲಾ ಕುಂದು ಕೊರತೆಗಳನ್ನು ಬಗೆಹರಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ವಿದ್ಯಾರ್ಥಿ ನಿಲಯ, ಸಾರಿಗೆ ಸೌಲಭ್ಯ, ವಿದ್ಯುತ್ ಸಮರ್ಪಕ ಪೂರೈಕೆ, ಹೆಚ್ಚುವರಿ ಕಟ್ಟಡ ಹೀಗೆ ಅಗತ್ಯವಾಗಿ ಬೇಕಾಗಿರುವಂತಹ ಸೌಲಭ್ಯದ ಬಗ್ಗೆ ಒತ್ತು ನೀಡಲಾಗುವುದು ಎಂದರು.
ಇದೇ ಸಂದರ್ಭ ಡಾ. ಮಂಥರ್ ಗೌಡ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವಿವಿಯ ಕುಲಸಚಿವರಾದ (ಮೌಲ್ಯಮಾಪನ) ಡಾ. ಸೀನಪ್ಪ ಮಾತನಾಡಿ, ಕೊಡಗು ವಿಶ್ವವಿದ್ಯಾಲಯವನ್ನು ಒಂದು ಮಾದರಿ ವಿಶ್ವವಿದ್ಯಾಲಯವನ್ನಾಗಿ ರೂಪಿಸಲು ಸಹಕಾರ ನೀಡುವಂತೆ, ಮೂಲಭೂತ ಸೌಲಭ್ಯಗಳ ಬೇಡಿಕೆಯನ್ನು ಪೂರೈಸುವಂತೆ ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಕೇಂದ್ರದ ಪ್ರಭಾರ ನಿರ್ದೇಶಕ ಪ್ರೊ. ಕೆ.ಕೆ. ಧರ್ಮಪ್ಪ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಾಜಕುಮಾರ್ ಎಸ್. ಮೇಟಿ, ಕುಶಾಲನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಬೋಧಕ ವೃಂದ, ಬೋಧಕೇತರ ವೃಂದ, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.