ಮಡಿಕೇರಿ, ಜು. ೨೯ : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಜಿಲ್ಲೆಯ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಇವುಗಳನ್ನು ವಿಕ್ಷೀಸಲು ಬರುವಂತಹ ಸಾರ್ವಜನಿಕರು/ ಪ್ರವಾಸಿಗರು ಸೌಂದರ್ಯಕ್ಕೆ ಮನಸೋತು ಬಹಳ ಹತ್ತಿರದಿಂದ ಪೋಟೋ ಅಥವಾ ವಿಡಿಯೋ ತೆಗೆಯುವ, ರೀಲ್ಸ್ ಮಾಡುವ ಅನಗತ್ಯ ಸಾಹಸಕ್ಕೆ ಕೈ ಹಾಕದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮನವಿ ಮಾಡಿದ್ದಾರೆ.

ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಟ ನಿಯಮಗಳನ್ನು ಅನುಸರಿಸಿ, ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರಿಗೆ, ಸೂಕ್ತ ಸುರಕ್ಷತೆ ಮತ್ತು ಭದ್ರತೆಯನ್ನು ಕಲ್ಪಿಸುವ ದೃಷ್ಟಿಯಿಂದ ಪ್ರವಾಸಿ ಮಿತ್ರರನ್ನೂ ಸಹ ನಿಯೋಜಿಸಲಾಗಿದೆ.

ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ನೀಡಿರುವ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿ ಜೀವವನ್ನು ಹಾನಿ ಮಾಡಿಕೊಳ್ಳುವ ಸಾಹಸಕ್ಕೆ ಕೈ ಹಾಕದಂತೆ ಅವರು ತಿಳಿಸಿದ್ದಾರೆ. ಹೋಟೆಲ್, ಹೋಂಸ್ಟೇ, ರೆಸಾರ್ಟ್ಗಳಲ್ಲಿ ತಂಗುವ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಮಾಲೀಕರು ಅಥವಾ ಸಿಬ್ಬಂದಿಗಳು ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಜಾಗೃತಿ ಹಾಗೂ ಸುರಕ್ಷತೆಯಿಂದ ಇರುವ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದ್ದಾರೆ.

ಈ ಎಲ್ಲ ಪ್ರಯತ್ನಗಳ ಹೊರತಾಗಿಯೂ ಪ್ರವಾಸಿಗರು ಸರ್ಕಾರದಿಂದ ವಿಧಿಸಿರುವ ನಿರ್ಬಂಧಗಳನ್ನು ಉಲ್ಲಂಘಿಸಿದಲ್ಲಿ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸದಿದ್ದಲ್ಲಿ ಪ್ರವಾಸಿಗರ ಮೇಲೆ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಚ್ಚರಿಸಿದ್ದಾರೆ.