ಚೆಟ್ಟಳ್ಳಿ, ಜು. ೩೧: ಚೆಟ್ಟಳ್ಳಿ ಪ್ರೌಢಶಾಲೆಯ ೨೦೨೩-೨೪ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

ಅತಿಥಿಗಳಾಗಿ ಭಾಗವಹಿಸಿದ್ದ ಪ್ರಶಾಂತ್ ಬೆಂಜಮಿನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಂದೆ, ತಾಯಿ ಗುರು-ಹಿರಿಯರನ್ನು ಗೌರವಿಸುವುದ ರೊಂದಿಗೆ ಶಿಸ್ತು, ಬದ್ಧತೆ, ಸಮಯಪಾಲನೆಯೊಂದಿಗೆ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಮಾತನಾಡಿ, ಮಕ್ಕಳು ಶಿಕ್ಷಕರ ಮಾರ್ಗದರ್ಶನದೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳ ಬೇಕೆಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕೆ. ತಿಲಕರವರು ಮಾತನಾಡಿ, ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಯಾಗಿದೆ ಎಂದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.