ಮಡಿಕೇರಿ, ಆ. ೧: ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುವ ನಿರಂತರ ಶೋಷಣೆ, ದೌರ್ಜನ್ಯ, ಹಿಂಸೆ ನಿಲ್ಲಬೇಕು. ಜೊತೆಗೆ ಮಕ್ಕಳನ್ನು ಭಿಕ್ಷಾಟನೆ, ದುಡಿಮೆಗೆ ದೂಡುವುದು ತಪ್ಪಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಂದಾಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾರ್ಮಿಕ, (ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ), ಪೊಲೀಸ್, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ‘ಮಾನವ ಕಳ್ಳ ಸಾಗಾಣಿಕೆ ತಡೆ’ ಕುರಿತು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ಸ್ಥಾನ ನೀಡಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳು ಮಹಿಳೆಯರು ಮತ್ತು ಮಕ್ಕಳಿಗೆ ತಲುಪಬೇಕು. ಮಹಿಳೆಯರು ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು.
ಮಕ್ಕಳ ಕಳ್ಳ ಸಾಗಾಣಿಕೆ ತಡೆಯುವಲ್ಲಿ ಎಲ್ಲರೂ ಎಚ್ಚರವಹಿಸಬೇಕಿದೆ. ಕೊಡಗು ಜನಸಂಖ್ಯೆಯಲ್ಲಿ ಚಿಕ್ಕ ಜಿಲ್ಲೆಯಾದರೂ ಸಹ ನಾಪತ್ತೆ, ಕಳ್ಳ ಸಾಗಾಣಿಕೆ ಪ್ರಕರಣಗಳು ಅಲ್ಲಲ್ಲಿ ಕಂಡು ಬರುತ್ತಿವೆ.
ಮಾನವ ಕಳ್ಳ ಸಾಗಾಣಿಕೆ ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಮಾಹಿತಿ ನೀಡುವಂತಾಗಬೇಕು. ಮಕ್ಕಳಿಗೆ ಪುನರ್ ವಸತಿ ಕಲ್ಪಿಸುವಂತಾಗಬೇಕು ಎಂದರು.
ಪ್ರತಿಯೊಬ್ಬರಿಗೂ ಬದುಕುವ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಉಚಿತ ಶಿಕ್ಷಣ ಪಡೆಯುವ ಹಕ್ಕು, ಸರ್ಕಾರ ನೀಡಿರುವಂತಹ ಸೌಲಭ್ಯಗಳನ್ನೂ ಪಡೆಯುವ ಹಕ್ಕು ಇವೆಲ್ಲವನ್ನೂ ಮಹಿಳೆಯರು ಮತ್ತು ಮಕ್ಕಳಿಗೆ ತಲುಪುವಂತೆ ಮಾಡಬೇಕು. ಇದರಿಂದ ಮಾನವ ಕಳ್ಳಸಾಗಣೆ ತಡೆಯಬಹುದಾಗಿದೆ ಎಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಅವರು ಮಾನವ ಕಳ್ಳ ಸಾಗಾಣಿಕೆಯಿಂದ ತಡೆಯಲು, ಸಂಕಷ್ಟದಲ್ಲಿರುವ ಜನರನ್ನು ರಕ್ಷಿಸಲು ಹಾಗೂ ಸಾಗಾಣಿಕೆಗೆ ಒಳಪಟ್ಟವರಿಗೆ ಸೂಕ್ತ ನ್ಯಾಯ ಒದಗಿಸಲು ಮುಡುಪಾಗಿಡಬೇಕು.
ಸಂವಿಧಾನದಲ್ಲಿ ನೀಡಿರುವ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಮನಸ್ಸು ಇರಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕರಾದ ಎಂ.ವೈ. ಮೈಮೂನ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜ, ಸಿಡಿಪಿಒ ಸೀತಾಲಕ್ಷಿö್ಮ, ವಕೀಲ ಕೆ.ಆರ್. ವಿದ್ಯಾಧರ, ಮಕ್ಕಳ ವಿಶೇಷ ಪೊಲೀಸ್ ಘಟಕದ ಹೆಡ್ಕಾನ್ಸ್ಟೇಬಲ್ ಮಹೇಶ್ ಕುಮಾರ್, ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಸಿರಾಜ್ ಅಹಮದ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಇತರರು ಇದ್ದರು.