ಮಡಿಕೇರಿ, ಆ.೧೦: ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ತಾ. ೧೨, ೧೩ ಮತ್ತು ೧೪ ರಂದು ನಡೆಯಲಿರುವ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಪಂಜಿನ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ ರ ಕಲಂ ೨೧ ರಲ್ಲಿ ದತ್ತವಾಗಿರುವ ಅಧಿಕಾರದಂತೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ತಾ.೧೧ ರ (ಇಂದು) ಮಧ್ಯರಾತ್ರಿ ೧೨ ಗಂಟೆಯಿAದ ತಾ. ೧೩ ರ ಬೆಳಿಗ್ಗೆ ೬ ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿ, ತಾ. ೧೨ ರಂದು ಮಧ್ಯರಾತ್ರಿ ೧೨ ಗಂಟೆಯಿAದ ತಾ. ೧೩ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ ೧೦ ಕಿ,ಮೀ. ಹಾಗೂ ತಾ. ೧೪ ರ ಬೆಳಿಗ್ಗೆ ೬ ಗಂಟೆಯಿAದ ಆಗಸ್ಟ್, ೧೪ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಕುಶಾಲನಗರ ಪಟ್ಟಣ ಹಾಗೂ ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್, ರೆಸ್ಟೋರೆಂಟ್ ಮತ್ತು ಕ್ಲಬ್‌ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್‌ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಬಂದೋಬಸ್ತ್: ತಾ. ೧೧ ರಂದು (ಇಂದು) ಮಡಿಕೇರಿಯಲ್ಲಿ ಪಂಜಿನ ಮೆರವಣಿಗೆ ನಡೆಯಲಿರುವುದರಿಂದ ಮಡಿಕೇರಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ನಗರ ಪ್ರವೇಶಿಸುವ ಎಲ್ಲಾ ಪ್ರವೇಶದ್ವಾರಗಳಲ್ಲಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‌ಗಳನ್ನು ಇರಿಸಿ ನಗರದೊಳಗಡೆ ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲಾಗಿದೆ.